ಕುಶಾಲನಗರ, ಸೆ.30 NEWS DESK : ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ಜತೆಗೂಡಿ ಉತ್ತಮ ಕಾರ್ಯ ಯೋಜನೆಗಳೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಎಸ್‍ಎಸ್‍ಎಲ್‍ಸಿ ಜಿಲ್ಲೆಯಲ್ಲಿ ಪರೀಕ್ಷೆಯಲ್ಲಿ ಈ ಬಾರಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ’ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಸಿ.ರಂಗಧಾಮಪ್ಪ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿಯ ಸಹಯೋಗದೊಂದಿಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವತಿಯಿಂದ ಕುಶಾಲನಗರ ಪಟ್ಟಣದ ಫಾತಿಮ ಕಾನ್ವೆಂಟ್ ಶಾಲೆಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಪ್ರೌಢಶಾಲಾ ಮುಖ್ಯಶಿಕ್ಷಕರಿಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಉತ್ತಮಪಡಿಸುವ ಕುರಿತು ಏರ್ಪಡಿಸಿದ್ದ ಶೈಕ್ಷಣಿಕ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2024-25 ನೇ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಶಿಕ್ಷಣ ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ಮುಖ್ಯ ಶಿಕ್ಷಕರು ಹಾಗೂ ವಿಷಯ ಶಿಕ್ಷಕರು ಕ್ರಿಯಾಶೀಲರಾಗಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಕುರಿತು ಆತ್ಮವಿಶ್ವಾಸ ಹಾಗೂ ಕಲಿಕಾ ಪ್ರೇರೇಪಣೆ ಮೂಡಿಸಬೇಕು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯು ಜೀವನದಲ್ಲಿ ಯಶಸ್ಸು ಪಡೆಯಲು ಹೆಜ್ಜೆ ಹಾಕುವ ಮೊದಲ ಪ್ರಮುಖ ಘಟ್ಟವಾಗಿದ್ದು, ಇಲ್ಲಿನ ಸಾಧನೆ ಜೀವನದ ಎಲ್ಲ ಹಂತಗಳಲ್ಲೂ ಪ್ರಭಾವ ಬೀರುತ್ತದೆ’ ಎಂಬ ಬಗ್ಗೆ ಶಿಕ್ಷಕರು ಪೋಷಕರು ಮತ್ತು ವಿದ್ಯಾರ್ಥಿ ಸಮುದಾಯದಲ್ಲಿ ಪ್ರೇರೇಪಣೆ ನೀಡಬೇಕು ಎಂದರು. ಕಳೆದ ಸಾಲಿನಲ್ಲಿ ರಾಜ್ಯದಲ್ಲಿ ಜಿಲ್ಲೆಯ ಫಲಿತಾಂಶವು 4ನೇ ಸ್ಥಾನದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಫಲಿತಾಂಶವು ಮೊದಲ ಸ್ಥಾನ ಗಳಿಸಲು ವಿಶೇಷ ಕಾಳಜಿ ಮತ್ತು ಹೆಚ್ಚಿನ ಶ್ರಮ ವಹಿಸಬೇಕು. ಪೋಷಕರು ಮತ್ತು ಮಕ್ಕಳಲ್ಲಿ ಸಂತಸದ ಭಾವನೆ ಮೂಡಿಸುವ ಮೂಲಕ ಮಕ್ಕಳಿಗೆ ಪರೀಕ್ಷಾ ಭಯ ನಿವಾರಣೆ ಮಾಡುವ ಮೂಲಕ ಅವರಲ್ಲಿ ಧೈರ್ಯ ಮತ್ತು ಆತ್ಮವಿಶ್ವಾಸ ತುಂಬಿ ಮನೋಸ್ಥೈರ್ಯ ಬೆಳೆಸಿ ಪರೀಕ್ಷೆಗೆ ಸಿದ್ಧಗೊಳಿಸಬೇಕು’ ಎಂದು
ಡಿಡಿಪಿಐ ರಂಗಧಾಮಪ್ಪ ಕರೆ ನೀಡಿದರು. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಒತ್ತಡ ಕಡಿಮೆ ಮಾಡಲು ಹಾಗೂ ಅವರು ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಉತ್ತಮ ಕಲಿಕಾ ವಾತಾವರಣ ನೀಡುವ ಮೂಲಕ ಅವರಲ್ಲಿ ಪರೀಕ್ಷೆಯ ಕುರಿತು ಆತ್ಮವಿಶ್ವಾಸ ಬೆಳೆಸಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.
ಎಂಟನೇ ತರಗತಿಯ ಎಲ್ಲಾ ಮಕ್ಕಳಿಗೂ ಎನ್.ಎನ್.ಎಂ.ಎಸ್. ಸ್ಪರ್ಧಾ ಪರೀಕ್ಷೆಗೆ ಅವಕಾಶ ಕಲ್ಪಿಸುವ ಮೂಲಕ ಅವರು ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯವನ್ನು ಬೆಳೆಸಲು ಶಿಕ್ಷಕರು ವಿಶೇಷ ಕಾಳಜಿ ವಹಿಸಬೇಕು ಎಂದು ಡಿಡಿಪಿಐ ರಂಗಧಾಮಪ್ಪ ಮುಖ್ಯ ಶಿಕ್ಷಕರಿಗೆ ಸಲಹೆ ನೀಡಿದರು.