ಮಡಿಕೇರಿ ಅ.1 NEWS DESK : 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ನಿವೃತ್ತಿ ಆರ್ಥಿಕ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಘೋಷಣೆಗಳನ್ನು ಕೂಗಿ ಆರ್ಥಿಕ ತಾರತಮ್ಯವನ್ನು ಸರಿಪಡಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. 2022ರ ಜುಲೈ 1ರಿಂದ 2024ರ ಜುಲೈ 31ರ ಅವಧಿಯಲ್ಲಿ ನಿವೃತ್ತಿಯಾದ ನೌಕರರಿಗೆ 6ನೇ ಆಯೋಗದ ಲೆಕ್ಕಾಚಾರದ ಅನುಸಾರ ಡಿ.ಸಿ.ಆರ್.ಜಿ. ಕಮ್ಯುಟೇಶನ್, ರಜೆ ನಗದೀಕರಣಗಳ ನಿವೃತ್ತಿ ಆರ್ಥಿಕ ಸೌಲಭ್ಯವನ್ನು ನೀಡಿದ್ದಾರೆ. ಈ ಕ್ರಮದಿಂದ ನಮಗೆ ಆರ್ಥಿಕ ನಷ್ಟವುಂಟಾಗಿ ಅನ್ಯಾಯವಾಗಿದೆ. ಸರ್ಕಾರ ತಕ್ಷಣ 2022ರ ಜುಲೈ 1ರಿಂದ 2024ರ ಜುಲೈ 31ರ ಅವಧಿಯೊಳಗೆ ನಿವೃತ್ತಿಯಾಗಿರುವ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ನಿವೃತ್ತಿ ಆರ್ಥಿಕ ಸೌಲಭ್ಯ ಕಲ್ಪಿಸಬೇಕು ಎಂದು ವೇದಿಕೆಯ ಜಿಲ್ಲಾ ಸಂಚಾಲಕ ಪಿ.ಎಸ್.ಜನಾರ್ಧನ ಒತ್ತಾಯಿಸಿದರು. 30 ರಿಂದ 40 ವರ್ಷ ಸುದೀರ್ಘ ಸೇವೆ ಸಲ್ಲಿಸಿದ ನಮ್ಮನ್ನು ಕಡೆಗಣಿಸಲಾಗಿದೆ. ಮತ್ತೊಮ್ಮೆ ಸರ್ಕಾರದ ಗಮನ ಸೆಳೆಯಲು ರಾಜ್ಯವ್ಯಾಪಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಬೇಡಿಕೆ ನ್ಯಾಯ ಸಮ್ಮತವಾಗಿದ್ದು, ಇದು ಈಡೇರುವವರೆಗೆ ಹೋರಾಟ ನಡೆಯಲಿದೆ ಎಂದರು. ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು, ಕ್ಷೇತ್ರದ ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ಎಲ್ಲಾ ತಹಶೀಲ್ದಾರರ ಮೂಲಕ ನೂರಾರು ನಿವೃತ್ತ ನೌಕರರು ಮನವಿಯನ್ನು ಸಲ್ಲಿಸಿದ್ದಾರೆ. ಅಲ್ಲದೆ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಸುಮಾರು 12 ಸಾವಿರ ನಿವೃತ್ತ ನೌಕರರು ವಿಶ್ರಾಂತ ನ್ಯಾಯಮೂರ್ತಿ ಸಂತೋಷ ಹೆಗಡೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ, ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ರಾಜ್ಯಾಧ್ಯಕ್ಷ ಡಾ.ಎಲ್.ಭೈರಪ್ಪ ಅವರ ಸಮ್ಮುಖದಲ್ಲಿ ನಮಗೆ ಆಗಿರುವ ಅನ್ಯಾಯದ ಕುರಿತು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತಿಗಳಿಗೆ ಮನವಿ ನೀಡಿದ್ದರೂ ಸ್ಪಂದನೆ ದೊರೆತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಸಂಚಾಲಕರುಗಳಾದ ಜಿ.ಎಂ.ಚಿನ್ನಯ್ಯ, ರಂಜಿತ್ ಕೆ.ಯು, ಶಿವಕುಮಾರ್ ಸಿ.ಕೆ, ಎಂ.ಪಿ.ನಾಣ್ಯಪ್ಪ, ಪದಾಧಿಕಾರಿಗಳಾದ ಪಿ.ಪಿ.ಇಂದಿರಾ, ಎಂ.ಜೆ.ಗಂಗಮ್ಮ, ಅವನಿಜ ಕೆ.ಕೆ ಮತ್ತಿತರ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದದರು.