ಮಡಿಕೇರಿ ಅ.1 NEWS DESK : ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಕೊಡಗು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ರಕ್ತ ನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಮಡಿಕೇರಿ ರೋಟರಿ ಮತ್ತು ಮಡಿಕೇರಿ ಮಾಜಿ ಸೈನಿಕರ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕೊಡಗು ಶಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ರೋಟರಿ ಹಾಲ್‍ನಲ್ಲಿ “ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ’ ಹಾಗೂ ‘ಸ್ವಯಂಪ್ರೇರಿತ ರಕ್ತದಾನ ಶಿಬಿರ’ ನಡೆಯಿತು. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಎನ್.ಆನಂದ್ ಮಾತನಾಡಿ, ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮದ ಮಹತ್ವದ ಕುರಿತು ವಿವರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ರಕ್ತದ ಅಗತ್ಯ ತುಂಬಾ ಇದೆ. ಎಲ್ಲಾ ಸಂಘ ಸಂಸ್ಥೆಗಳ ಸಹಕಾರದಿಂದ ಹೆಚ್ಚು ರಕ್ತದಾನ ಶಿಬಿರಗಳು ಆಯೋಜನೆಯಾಗುತ್ತದೆ. ಎಲ್ಲರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ರೋಟರಿ ಸಂಸ್ಥೆಯ ಅಧ್ಯಕ್ಷ ಸುದಯ್ ನಾಣಯ್ಯ, ಎಲ್ಲಾ ದಾನಕ್ಕಿಂತ ರಕ್ತದಾನ ಶ್ರೇಷ್ಠ ದಾನ. ರಕ್ತದಾನದಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು ಎಂಬುದಾಗಿ ಹೇಳಿದರು. ಕೊಡಗು ಶಾಖೆ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ಮಾತನಾಡಿ, ತುರ್ತು ಸಂದರ್ಭದಲ್ಲಿ ರಕ್ತದ ಅಗತ್ಯ ತುಂಬಾ ಇದೆ. ರಕ್ತದಾನ ಜೀವದಾನ, ಯುವಜನತೆ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು. ಹಾಗೂ ಪ್ರತಿಯೊಬ್ಬರೂ ಸದೃಡರಾಗಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಮಾತನಾಡಿ, ಯುವಜನತೆ ರಕ್ತದಾನ ಮಾಡಲು ಮುಂದೆ ಬರಬೇಕು. ರಕ್ತದ ಅವಶ್ಯಕತೆ ಮತ್ತು ಬೇಡಿಕೆಯ ಕುರಿತು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಒಂದು ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಮಡಿಕೇರಿ ಹಾಗೂ 4 ರಕ್ತಶೆಖರಣಾ ಘಟಕಗಳು ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ ಹಾಗೂ ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು. ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕೆ.ಪಿ.ಕುಟ್ಟಪ್ಪ, ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಮುರಳಿಧರ್, ಮಡಿಕೇರಿ ರೋಟರಿ ಸಂಸ್ಥೆಯ ಕಾರ್ಯದರ್ಶಿ ಪ್ರಿನ್ಸ್ ಪೊನ್ನಣ್ಣ ಇದ್ದರು. ಜಿಲ್ಲೆಯಲ್ಲಿ ಅತೀ ಹೆಚ್ಚು ರಕ್ತದಾನ ಮಾಡಿದ ರಕ್ತದಾನಿಗಳಾದ ಸಿ.ಸಿ.ಚಂಗಪ್ಪ ಅವರು 21 ಬಾರಿ, ಸುಮಿತ 12 ಬಾರಿ ಅವರನ್ನು ಸನ್ಮಾನಿಸಲಾಯಿತು. ರಕ್ತದಾನ ಶಿಬಿರದಲ್ಲಿ ಒಟ್ಟು 25 ಯುನಿಟ್ ರಕ್ತ ಸಂಗ್ರಹಿಸಲಾಯಿತು. ಶಿಬಿರದಲ್ಲಿ ಮಡಿಕೇರಿ ಮಾಜಿ ಸೈನಿಕರ ಸಂಘದ ಸದಸ್ಯರು, ರೋಟರಿ ಸಂಘದ ಸದಸ್ಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಇತರರು ರಕ್ತದಾನ ಮಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು ಸ್ವಾಗತಿಸಿದರು. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಕಮಲ ಪ್ರಾರ್ಥಿಸಿದರು. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕರಾದ ಸುನಿತ ಮುತ್ತಣ್ಣ ನಿರೂಪಿಸಿ, ವಂದಿಸಿದರು.