ಮಡಿಕೇರಿ ಅ4 NEWS DESK : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮಾವಾದ) ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಕೆ.ಬಿ.ರಾಜು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಈ ದೇಶದ ಮೂಲ ನಿವಾಸಿಗಳು, ಆದರೆ ನಮ್ಮನ್ನು ಆಳುವ ಸರ್ಕಾರ ಶೋಷಿತ ಸಮುದಾಯಗಳ ಅಭಿವೃದ್ಧಿ, ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಒತ್ತು ನೀಡುವುದನ್ನು ಬಿಟ್ಟು ಎಲ್ಲಾ ಸೌಲಭ್ಯಗಳನ್ನು ಕಸಿದುಕೊಳ್ಳುತ್ತಿದೆ. ದಲಿತರ ಹಿತ ಕಾಯುವಲ್ಲಿ ಆಡಳಿತ ವ್ಯವಸ್ಥೆ ವಿಫಲವಾಗುತ್ತಿದೆ ಎಂದು ಆರೋಪಿಸಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿ ವೇತನ 5ಸಾವಿರ, ಹತ್ತನೇ ತರಗತಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ರೂ.25ಸಾವಿರ ನೀಡಬೇಕು, ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಅವಕಾಶ ನೀಡಬೇಕು, ವಿದ್ಯಾರ್ಥಿಗಳಿಗೆ ಎಲ್ಲಾ ಸೌಲಭ್ಯಗಳನ್ನು ನೀಡಬೇಕು, ಸರ್ಕಾರಿ ಕಚೇರಿಯಲ್ಲಿ ದಲಿತ ಅಧಿಕಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಬೇಕೆಂದು ಒತ್ತಾಯಿಸಿದರು. ವಸತಿ ಶಾಲೆಯಗಳ ನೇಮಕಾತಿಯಲ್ಲಿ ಎಲ್ಲಾ ಮಕ್ಕಳಿಗೂ ಅವಕಾಶ ಕಲ್ಪಿಸಬೇಕು, ಮೂಡಾ ಹಗರಣದಲ್ಲಿ ಭಾಗಿಯಾಗಿರುವವರನ್ನು ತಕ್ಷಣವೇ ಬಂಧಿಸಬೇಕು, ಬೌದ್ಧ ಸಮಾಜದ ಸಾಮಾಜಿಕ ಆರ್ಥಿಕ ಅಭಿವೃದ್ಧಿಗೆ ಕರ್ನಾಟಕ ಬೌದ್ಧ ಧರ್ಮ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು, ಬಡವರಿಗೆ ನಿವೇಶನ ನೀಡಬೇಕು, ಮನೆಕಟ್ಟಿಕೊಂಡಿರುವವರಿಗೆ ಹಕ್ಕುಪತ್ರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜು ಆಗ್ರಹಿಸಿದರು. ಸಮಿತಿಯ ಜಿಲ್ಲಾಧ್ಯಕ್ಷ ಬಿ.ಎಸ್.ರಮೇಶ್, ಉಪಾಧ್ಯಕ್ಷ ಮಹೇಶ್, ಪ್ರಧಾನ ಕಾರ್ಯದರ್ಶಿ ಡಿ.ಟಿ.ಸುರೇಶ್ ಕುಮಾರ್, ಸಂಚಾಲಕಿ ಕೆ.ಜೆ.ಸುಮಿತ್ರಮ್ಮ, ಪ್ರಮುಖರಾದ ಬಿ.ಆರ್.ಅನಿತಾ, ಹೆಚ್.ಎಸ್.ಗಂಗಾಧರ್, ಶುಶೀಲಮ್ಮ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರರು ಬೇಡಿಕೆಯ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರಿಗೆ ಸಲ್ಲಿಸಿದರು.