ಮಡಿಕೇರಿ ಅ.5 NEWS DESK : ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ಶೈಕ್ಷಣಿಕ ಹಾಗೂ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷದ್ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಎಬಿವಿಪಿ ಪ್ರಮುಖರಾದ ಕೌಶಲ್ಯ ನೇತೃತ್ವದಲ್ಲಿ ಜಮಾಯಿಸಿದ ಫೀ.ಮಾ.ಕಾರ್ಯಪ್ಪ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಸರ್ಕಾರಿ ವಿವಿಗಳಲ್ಲಿ ಹಾಗೂ ವಿವಿ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಮರ್ಪಕ ಬೋಧಕ ವರ್ಗವಿಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ರಾಜ್ಯದ 460ಕ್ಕೂ ಅಧಿಕ ಪ್ರಥಮ ದರ್ಜೆ ಕಾಲೇಜುಗಳ ಖಾಯಂ ಉಪನ್ಯಾಸಕರಿಲ್ಲದೆ ಸಮಸ್ಯೆ ತಲೆದೋರಿದೆ. ತಕ್ಷಣವೇ ಸರ್ಕಾರ ಈ ಸಮಸ್ಯೆಗಳನ್ನು ಪರಿಹರಿಸಿ ವಿದ್ಯಾರ್ಥಿಗಳ ನೆರವಿಗೆ ಬರಬೇಕೆಂದು ಆಗ್ರಹಿಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ಮೂಲಕ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.