ವಿರಾಜಪೇಟೆ NEWS DESK ಅ.6 : ಪ್ರಜಾಪ್ರಭುತ್ವದ ಆರಂಭ ಮತ್ತು ಅರಿವು ಶಾಲಾ ಕಾಲೇಜುಗಳಿಂದಲೇ ಆರಂಭವಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು. ವಿದ್ಯಾರ್ಥಿ ಜೀವನವು ಅಮೂಲ್ಯವಾಗಿದ್ದು ಅದನ್ನು ಮರಳಿ ಪಡೆಯಲು ಸಾಧ್ಯವಿಲ್ಲ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆ ಶಾಲಾ ಕಾಲೇಜುಗಳಿಂದಲೇ ಆರಂಭವಾಗುತ್ತದೆ. ಕಾಲೇಜುಗಳಲ್ಲಿ ಚುನಾವಣೆಯ ಮೂಲಕವೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ. ಎಲ್ಲರನ್ನು ಸಮಾನತೆಯಿಂದ ಕಾಣಬೇಕು, ಮಾನವೀಯ ಮೌಲ್ಯಗಳೊಂದಿಗೆ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬೇಕು. ಆ ಮೂಲಕ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಸುರೇಶ್ ಅಲೆಟ್ಟಿ ಅವರು ವಿದ್ಯಾರ್ಥಿ ಜೀವನ ಎಂದರೆ ಗುರಿಯನ್ನು ನಿಭಾಯಿಸುವ ವ್ಯವಸ್ಥೆ. ಕ್ರಿಯಾಶೀಲ ವ್ಯಕ್ತಿತ್ವವನ್ನು ವ್ಯಕ್ತಪಡಿಸುವ ವೇದಿಕೆಯೇ ಕಾಲೇಜು. ಇದಕ್ಕೆ ವೇದಿಕೆ ಒದಗಿಸುವುದು ವಿದ್ಯಾರ್ಥಿ ಸಂಘ ಎಂದರು. ಮತ್ತೋರ್ವ ಮುಖ್ಯ ಅತಿಥಿ ಕಾವೇರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಪ್ರೊ.ಇಟ್ಟಿರ ಬಿದ್ದಪ್ಪ ಮಾತನಾಡಿ ಪ್ರಜಾಪ್ರಭುತ್ವದ ತಳಹದಿಯಲ್ಲಿ ಕ್ರಿಯಾಶೀಲರಾಗಿ ಉತ್ತಮ ಸಮಾಜವನ್ನು ನಿರ್ಮಿಸಲು ವಿದ್ಯಾರ್ಥಿ ಸಂಘ ವೇದಿಕೆಯಾಗಿದೆ. ಕವಿ ಸಿದ್ದಯ್ಯ ಪುರಾಣಿಕರ ನುಡಿಯಂತೆ ಮೊದಲು ಮಾನವರಾಗಬೇಕು. ಯಾವುದೇ ಉನ್ನತ ಹುದ್ದೆಯಲ್ಲಿದ್ದರು ಮಾನವೀಯ ಮೌಲ್ಯಗಳನ್ನು ಹೊಂದಿರಬೇಕು ಎಂದು ತಿಳಿಸಿದರು. ಕಾಲೇಜ್ ನ ಪ್ರಾಂಶುಪಾಲ ಡಾ.ಕೆ.ಸಿ.ದಯಾನಂದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಂಸ್ಕೃತಿಕ ಸಮಿತಿಯ ಸಂಚಾಲಕ ಹಾಗೂ ರೋವರ್ಸ್ ಅಧಿಕಾರಿ ವೇಣುಗೋಪಾಲ್, ವಿದ್ಯಾರ್ಥಿ ಕ್ಷೇಮಪಾಲನ ಸಂಚಾಲಕ ಆರ್.ರಘುರಾಜ್, ಕ್ರೀಡಾ ಸಮಿತಿ ಸಂಚಾಲಕ ಎನ್.ಗುರುಪ್ರಸಾದ್, ಐಕ್ಯೂಎಸಿ ಸಂಚಾಲಕ ಡಾ.ಕೆ.ಬಸವರಾಜು, ವಿದ್ಯಾರ್ಥಿ ಪದಾಧಿಕಾರಿಗಳು, ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಶಾಸಕ ಎ.ಎಸ್.ಪೊನ್ನಣ್ಣ, ಕಾವೇರಿ ವಿದ್ಯಾಸಂಸ್ಥೆಯ ಅಧ್ಯಕ್ಷÀ ಪ್ರೊ.ಬಿದ್ದಪ್ಪ ಹಾಗೂ ಕುಲಸಚಿವ ಸುರೇಶ್ ಅಲೆಟ್ಟಿ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.