ಮಡಿಕೇರಿ ಅ.14 NEWS DESK : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ “ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯಕ್ಕೆ ಆಧ್ಯತೆ ನೀಡುವ ಸಮಯ” ಎಂಬ ಘೋಷ ವಾಕ್ಯದೊಂದಿಗೆ “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2024” ಆಚರಿಸಲಾಯಿತು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಮುನಿರತ್ನಮ್ಮ ಉದ್ಘಾಟಿಸಿ, ಅತಿಯಾದ ಕೆಲಸದ ಅವಧಿ ಮತ್ತು ಸ್ಪಷ್ಟತೆ ಇರದ ಸಂದೇಶಗಳು, ಮಾನಸಿಕ ಕ್ಷೋಭೆ ಉಂಟು ಮಾಡುತ್ತವೆ. ನೌಕರರ ಒಳ್ಳೆಯ ಕೆಲಸಗಳಿಗೆ ಪ್ರೋತ್ಸಾಹ ಸಿಗದಿರುವುದು ಕೂಡ ಮಾನಸಿಕ ಅನಾರೋಗ್ಯ ಉಂಟುಮಾಡಬಹುದು ಎಂದು ಹೇಳಿದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಮಾತನಾಡಿ, ಮಾನಸಿಕ ಆರೋಗ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಕಿವಿ ಮಾತನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ಬಿ.ರಾಘವ ಮಾತನಾಡಿ, ಮಾನಸಿಕ ಆರೋಗ್ಯಕ್ಕೆ ಆಧ್ಯತೆಯನ್ನು ನೀಡಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಎನ್.ಆನಂದ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಬಿ.ಎ.ಅಶ್ವಿನಿ, ತೃತೀಯ ಪ್ರಥಮ ಬಹುಮಾನ, ಆಶಿಕಾ ಪ್ರಥಮ ಬಿ.ಎಸ್.ಸಿ ದ್ವಿತೀಯ ಬಹುಮಾನ ಮತ್ತು ವರ್ಷ ಟಿ.ವಿ ದ್ವಿತೀಯ ಬಿ.ಎ ತೃತೀಯ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನವನ್ನು ನೀಡಲಾಯಿತು. ರಾಷ್ಟ್ರೀಯ ಮಾನಸಿಕ ಆರೋಗ್ಯದ ವತಿಯಿಂದ “ಟೆಲಿ ಮನಸ್ಸು” ಪೋಸ್ಟರ್ ಬಿಡುಗಡೆ ಮಾಡಲಾಯಿತು. ಸಂಪನ್ಮೂಲ ವ್ಯಕ್ತಿಯಾದ ಡಾ.ಡೇವಿನ್ ಕರ್ಕಡ ಮನೋವೈದ್ಯರು, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಅಧಿಕಾರಿ ಡಾ. ಕೆ.ಶೈಲಶ್ರೀ ಹಾಗೂ ಅಲೋಕ್ ಬಿ.ಜೈ ಹಾಜರಿದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಬಿ.ಎಸ್.ಜಯಪ್ಪ ವಂದಿಸಿದರು.