ಮಡಿಕೇರಿ ಅ.16 NEWS DESK : ಕೊಡಗು ವಿಶ್ವವಿದ್ಯಾನಿಲಯ ಅತಿಥಿ ಉಪನ್ಯಾಸಕರುಗಳ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಕೊಡಗು ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಎಂ.ಎ.ಶ್ಯಾಮ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ ಅತಿಥಿ ಉಪನ್ಯಾಸಕರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಡಲಾಗಿದೆ. ಆದರೆ ಇಲ್ಲಿಯವರೆಗೆ ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದು ಟೀಕಿಸಿದ್ದಾರೆ. 2023ರ ಆಗಸ್ಟ್ ಮತ್ತು ಸೆಪ್ಟೆಂಬರ್ ಹಾಗೂ 2024ರ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆದ ಪರೀಕ್ಷಾ ಕೊಠಡಿ ಮೇಲ್ವಿಚಾರಕರ ಕೆಲಸ ಹಾಗೂ 2024 ಜುಲೈ ತಿಂಗಳಿನಲ್ಲಿ ನಡೆಸಿದ ಉತ್ತರ ಪತ್ರಿಕೆಯ ಮೌಲ್ಯಮಾಪನದ ಸಂಭಾವನೆಯನ್ನು ನೀಡದೆ ಇರುವುದರಿಂದ ಅತಿಥಿ ಉಪನ್ಯಾಸಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇದಕ್ಕೆ ಕೊಡಗು ವಿಶ್ವ ವಿದ್ಯಾನಿಲಯದ ಆಡಳಿತ ವೈಫಲ್ಯವೇ ಕಾರಣ. ಅಲ್ಲದೆ ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯ ದುರ್ಬಲ ಆಡಳಿತದಿಂದಾಗಿ ಅತಿಥಿ ಉಪನ್ಯಾಸಕರ ಸೇವಾಭದ್ರತೆ ಮತ್ತು ಇಡಿಗಂಟು ಸೌಲಭ್ಯ ಮರೀಚಿಕೆಯಾಗಿದೆ ಎಂದು ಆರೋಪಿಸಿದ್ದಾರೆ. ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ, ಪ್ರಸ್ತುತ ಸಾಲಿನ ವರ್ಗಾವಣೆ ಮತ್ತು 1242 ಸಹ ಪ್ರಾಧ್ಯಾಪಕರ ಕೌನ್ಸಿಲಿಂಗ್ ಪ್ರಕ್ರಿಯೆಯಿಂದಾಗಿ 5200 ಮಂದಿ ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಆಡಳಿತ ವ್ಯವಸ್ಥೆ ಅತಿಥಿ ಉಪನ್ಯಾಸಕರ ಸಂಕಷ್ಟಕ್ಕೆ ಸ್ಪಂದಿಸದೆ ಕಡೆಗಣಿಸಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಆದ್ದರಿಂದ ತಕ್ಷಣ ಜನಪ್ರತಿನಿಧಿಗಳು ಹಾಗೂ ಕೊಡಗು ವಿವಿಯ ಪ್ರಮುಖರು ತಕ್ಷಣ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿರುವ ಎಂ.ಎ.ಶ್ಯಾಮ್ ಪ್ರಸಾದ್, ತಪ್ಪಿದಲ್ಲಿ ಮತ್ತೊಮ್ಮೆ ಹೋರಾಟ ರೂಪಿಸುವುದು ಅನಿವಾರ್ಯವಾಗುತ್ತದೆ ಎಂದು ತಿಳಿಸಿದ್ದಾರೆ.