ಮಡಿಕೇರಿ ಅ.17 NEWS DESK : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು (ಅ.17) ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವವಾಯಿತು. ಭಕ್ತರ ಜಯಘೋಷ, ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕುಂಡಿಕೆಯಲ್ಲಿ ತಾಯಿ ಕಾವೇರಿ ತೀರ್ಥರೂಪಿಣಿಯಾಗಿ ಕಾಣಿಸಿಕೊಂಡಳು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್, ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಸಿ.ಅಪ್ಪಾಜಿ, ಕೋಡಿ.ಯು. ಮೋಟಯ್ಯ ಮಠಾಧೀಶರು ಮತ್ತಿತರ ಗಣ್ಯರು ತೀರ್ಥೋದ್ಭವದ ಪವಿತ್ರ ಕ್ಷಣಕ್ಕೆ ಸಾಕ್ಷಿಯಾದರು. ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತರು ಭಾಗಮಂಡಲ ಕ್ಷೇತ್ರಕ್ಕೆ ಆಗಮಿಸಿ ಶ್ರೀಭಗಂಡೇಶ್ವರನಿಗೆ ಪೂಜೆ ಸಲ್ಲಿಸಿದರು. ನಂತರ ಕಾಲ್ನಡಿಗೆಯ ಮೂಲಕ ಕಾವೇರಿ ಮಾತೆಯ ಸ್ಮರಣೆಯೊಂದಿಗೆ ತಲಕಾವೇರಿಗೆ ತೆರಳಿದರು.