ಮಡಿಕೇರಿ ಅ.26 NEWS DESK : ಕೊಡಗು ಜಿಲ್ಲೆಯಲ್ಲಿ ಮುಂಗಾರು ಅವಧಿ ಮುಗಿದಿದ್ದು, ವಸತಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಸಾಧಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಪ್ರಗತಿ ಸಂಬಂಧ ಮಾಹಿತಿ ಪಡೆದು ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಬಸವ, ಅಂಬೇಡ್ಕರ್, ಪಿಎಂಜಿಎಸ್‍ವೈ, ಮತ್ತಿತರ ವಸತಿ ಯೋಜನೆಯಡಿ 2010-11 ರಿಂದ ಮನೆ ನಿರ್ಮಾಣಕ್ಕೆ ಬಾಕಿ ಇದ್ದು, ಸಾಧ್ಯವಾದಷ್ಟು ಪ್ರಗತಿ ಸಾಧಿಸುವತ್ತ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ವಸತಿ ಯೋಜನೆಯಡಿ ಪರಿಶಿಷ್ಟರಿಗೆ 2 ಲಕ್ಷ ರೂ., ಸಾಮಾನ್ಯರಿಗೆ 1.20 ಲಕ್ಷ ರೂ., ಇದ್ದು, ವಸತಿ ಯೋಜನೆ ಪ್ರಗತಿ ಸಾಧಿಸಲು ಯಾವ ರೀತಿ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ವಸತಿ ಯೋಜನೆ ಪ್ರಗತಿ ಸಾಧಿಸುವಲ್ಲಿ ತಾ.ಪಂ.ಇಒಗಳು ಮತ್ತು ಪಿಡಿಒಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ಆ ನಿಟ್ಟಿನಲ್ಲಿ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು. ತಾ.ಪಂ.ಇಒ ಶೇಖರ್ ಅವರು ಪರಿಶಿಷ್ಟ ಪಂಗಡ ಯೋಜನೆಯಡಿ ವಿಶೇಷವಾಗಿ 4.50 ಲಕ್ಷ ರೂ. ಘಟಕ ವೆಚ್ಚವಿದೆ. ಆದ್ದರಿಂದ ಕನಿಷ್ಠ 5 ಲಕ್ಷ ರೂ.ವರೆಗೆ ಹೆಚ್ಚಿಸಿದರೆ ಮನೆಗಳ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. ವಸತಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್ ಅವರು ಬಸವ ವಸತಿ ಯೋಜನೆಯಡಿ 2010-11 ರಿಂದ 2021-22 ರವರೆಗೆ 22,522 ಮನೆ ನಿರ್ಮಿಸುವ ಗುರಿಯಲ್ಲಿ 18,751 ಮನೆಗಳಿಗೆ ಮಂಜೂರಾಗಿದ್ದು, ಇದರಲ್ಲಿ 12,633 ಮನೆಗಳ ಕಾರ್ಯ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು. ಅಂಬೇಡ್ಕರ್ ವಸತಿ ಯೋಜನೆಯಡಿ 2015-16 ರಿಂದ 2021-22 ರವರೆಗೆ 5,960 ಗುರಿಯಲ್ಲಿ 2,252 ಮನೆಗಳಿಗೆ ಮಂಜೂರಾಗಿದ್ದು, 1,799 ಮನೆಗಳು ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 2016-17 ರಿಂದ 2024-25 ರವರೆಗೆ 123 ಮನೆಗಳ ಗುರಿ ಇದ್ದು, 123 ಮನೆಗಳಲ್ಲಿ 116 ಮನೆ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದು, 51 ಮನೆಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು. ಒಟ್ಟಾರೆ ಜಿಲ್ಲೆಯಲ್ಲಿ 29,999 ಗುರಿಯಲ್ಲಿ 22,098 ಮನೆಗಳಿಗೆ ಮಂಜೂರಾತಿ ದೊರೆತಿದ್ದು, ಇದರಲ್ಲಿ 15,341 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು. ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ತಲಕಾವೇರಿಯಿಂದ ಕುಶಾಲನಗರದವರೆಗೆ ಕಾವೇರಿ ನದಿ ಪಾತ್ರದಲ್ಲಿ ಸ್ವಚ್ಛತೆ ಸಂಬಂಧಿಸಿದಂತೆ ಕೂಡಲೇ ಸಮೀಕ್ಷೆ ಮಾಡಿ ವರದಿ ನೀಡುವಂತೆ ಇದೇ ಸಂದರ್ಭದಲ್ಲಿ ಸೂಚಿಸಿದರು. ಕಾವೇರಿ ನದಿ ಪಾತ್ರದಲ್ಲಿ ಪರಿಸರ ಸಂರಕ್ಷಣೆ ಮಾಡುವುದು ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಪಂಚಾಯತ್ ರಾಜ್, ನಗರಾಭಿವೃದ್ಧಿ ಹಾಗೂ ಪೌರಾಡಳಿತ ಇಲಾಖೆಗಳು ಜಂಟಿಯಾಗಿ ಸಮೀಕ್ಷೆ ಮಾಡಿ ವರದಿ ನೀಡುವಂತೆ ಸ್ಪಷ್ಟ ನಿರ್ದೇಶನ ನೀಡಿದರು. ಮಳೆಗಾಲ ಮುಗಿದಿರುವುದರಿಂದ ಲೋಕೋಪಯೋಗಿ, ಪಂಚಾಯತ್ ರಾಜ್, ನಗರಾಭಿವೃದ್ಧಿ, ಪಿಎಂಜಿಎಸ್‍ವೈ, ಹೀಗೆ ವಿವಿಧ ಎಂಜಿನಿಯರಿಂಗ್ ಇಲಾಖೆಗಳು ರಸ್ತೆ, ಕಟ್ಟಡ ಕಾಮಗಾರಿ ಪ್ರಗತಿ ಸಾಧಿಸುವಂತೆ ಡಾ.ಎನ್.ವಿ.ಪ್ರಸಾದ್ ಅವರು ತಾಕೀತು ಮಾಡಿದರು. ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಹೀಗೆ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿನ ಕಾರ್ಯಕ್ರಮಗಳನ್ನು ಕೃಷಿಕರಿಗೆ ತಲುಪಿಸಬೇಕು. ಬೆಳೆ ವಿಮೆ ಯೋಜನೆ, ಬೆಳೆ ಹಾನಿ ಮತ್ತಿತರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನಾ ಕಾರ್ಯಕ್ರಮಗಳನ್ನು ಕಾಲ ಮಿತಿಯಲ್ಲಿ ಪ್ರಗತಿ ಸಾಧಿಸುವಂತೆ ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಿದರು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಜಿ.ಪಂ.ವ್ಯಾಪ್ತಿಯ ರಸ್ತೆ, ಕುಡಿಯುವ ನೀರು ಮತ್ತಿತರ ಕಾಮಗಾರಿಯ ಪ್ರಗತಿ ಸಾಧಿಸಲಾಗುತ್ತಿದೆ ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುಲ್ಲಿ ಅಗತ್ಯ ಕ್ರಮವಹಿಸಲಾಗಿದೆ ಎಂದು ವಿವರಿಸಿದರು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಪಂಚಾಯತ್ ರಾಜ್ ಎಂಜಿನಿಯರ್ ನಾಯಕ್, ಸುರೇಶ್ ಕುಮಾರ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕವಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಸನ್ನ, ತಹಶೀಲ್ದಾರರು, ತಾ.ಪಂ.ಇಒಗಳು ಇತರರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.