ಕುಶಾಲನಗರ, ಅ.30 NEWS DESK : ಸ್ವಚ್ಛ ದೀಪಾವಳಿ, ಸ್ವಸ್ಥ ದೀಪಾವಳಿ’, ನಮ್ಮ ನಡೆ ಹಸಿರೆಡೆಗೆ ಗೋ ಗ್ರೀನ್ ಅಭಿಯಾನದಡಿ
ಕುಶಾಲನಗರ ತಾಲ್ಲೂಕಿನ ಗುಮ್ಮನಕೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ “ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ” ಕುರಿತು ಜಾಗೃತಿ ಜಾಥಾ ನಡೆಯಿತು. ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ಶಾಲೆಯ ಇಕೋ ಕ್ಲಬ್ ವತಿಯಿಂದ ಏರ್ಪಡಿಸಿದ್ದ ಜಾಗೃತಿ ಅಭಿಯಾನದಲ್ಲಿ ವಿದ್ಯಾರ್ಥಿಗಳು ಗುಮ್ಮನಕೊಲ್ಲಿ ಗ್ರಾಮದಲ್ಲಿ ಜಾಥಾ ನಡೆಸಿ ಮಾಲಿನ್ಯಕಾರಿ ಪಟಾಕಿ ಸಿಡಿಸುವುದರಿಂದ ಉಂಟಾಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸಿದರು. ದೀಪಾವಳಿ ಹಬ್ಬದಲ್ಲಿ ಮಾಲಿನ್ಯಕಾರಿ ಪಟಾಕಿಗಳನ್ನು ತ್ಯಜಿಸಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸುವ ಮೂಲಕ ಹಸಿರು ದೀಪಾವಳಿ ಆಚರಿಸಬೇಕು ಎಂದು ಮನವಿ ಮಾಡಿದರು. ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ.ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ,ದೀಪಾವಳಿ ಸಂದರ್ಭದಲ್ಲಿ ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ಸಾಕುಪ್ರಾಣಿಗಳನ್ನು ರಕ್ಷಿಸಲು ಪಟಾಕಿಗಳನ್ನು ತಪ್ಪಿಸುವ ಮೂಲಕ ಪರಿಸರ ಸ್ನೇಹಿ ದೀಪಾವಳಿಯನ್ನು ಹೇಗೆ ಆಚರಿಸಬೇಕು ಎಂಬ ಬಗ್ಗೆ ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಕಣ್ಣಿಗೆ ಮುದ ನೀಡಿ ಅಂಧತ್ವಕ್ಕೆ ಕಾರಣವಾಗುವ ಪಟಾಕಿ ಸಿಡಿತದಿಂದ ಉಂಟಾಗುವ ವಾಯು ಮಾಲಿನ್ಯವು ನಮ್ಮ ಆರೋಗ್ಯ ಹಾಗೂ ಪರಿಸರವನ್ನು ಕೆಡಿಸುವ ರಾಸಾಯನಿಕಗಳ ವಿಷಗುಳಿಗೆಗಳಾಗಿವೆ ಎಂದರು. ಹಸಿರು ದೀಪಾವಳಿ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಪಟಾಕಿ ಸಿಡಿತವು ನಮ್ಮ ಆರೋಗ್ಯ ಹಾಗೂ ಪರಿಸರಕ್ಕೆ ಹಾನಿಯುಂಟು ಮಾಡುತ್ತವೆ. ಈ ದಿಸೆಯಲ್ಲಿ ನಾವು ಸ್ವಚ್ಛ ಹಾಗೂ ಸ್ವಸ್ಥ ಪರಿಸರಕ್ಕಾಗಿ ಹಸಿರು ದೀಪಾವಳಿ ಆಚರಿಸುವ ಮೂಲಕ ಮಾಲಿನ್ಯ ತಡೆಯಬೇಕು ಎಂದರು. ಪಟಾಕಿ ಸಿಡತವು ನೆಲ, ಜಲ, ಗಾಳಿಯನ್ನು ವಿಕಾರಗೊಳಿಸಿ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತವೆ ಎಂದರು. ಹಸಿರು ದೀಪಾವಳಿ ಆಚರಣಾ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ಶಾಲಾ ಮುಖ್ಯ ಶಿಕ್ಷಕಿ ಎಚ್.ಹೆಚ್.ಸಾಕಮ್ಮ , ವಿದ್ಯಾರ್ಥಿಗಳು ಪಟಾಕಿ ತ್ಯಜಿಸಿ ಹಣತೆ ಬೆಳಗಿಸಿ ಹಸಿರು ದೀಪಾವಳಿ ಆಚರಿಸಬೇಕು ಎಂದರು. ಸ್ವಚ್ಛ ಹಾಗೂ ಸ್ವಸ್ಥ ದೀಪಾವಳಿ ಆಚರಣೆ ಕುರಿತ ಪ್ರತಿಜ್ಞಾ ವಿಧಿಯನ್ನು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಹೆಚ್.ಎಸ್.ಉಮಾದೇವಿ ಬೋಧಿಸಿದರು. ಸಿ ಆರ್ ಪಿ ಟಿ.ಈ.ವಿಶ್ವನಾಥ್ ,ಪರಿಸರ ಘೋಷಣೆಗಳ ಭಿತ್ತಿ ಫಲಕಗಳನ್ನು ಬಿಡುಗಡೆಗೊಳಿಸಿದರು. ಶಾಲಾ ವಿದ್ಯಾರ್ಥಿನಿ ಅಸ್ಮಿಯ ಅನಿಸಿಕೆ ವ್ಯಕ್ತಪಡಿಸಿ, ತಾನು ಜನರಲ್ಲಿ ಹಸಿರು ದೀಪಾವಳಿ ಆಚರಿಸುವ ಮೂಲಕ ಪಟಾಕಿ ತ್ಯಜಿಸುವ ಬಗ್ಗೆ ಜಾಗೃತಿ ಮೂಡಿಸುತ್ತೇನೆ ಎಂದರು. ಜಿಲ್ಲಾ ಗೈಡ್ಸ್ ವಿಭಾಗದ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸ್ಕೌಟ್ಸ್, ಗೈಡ್ಸ್ ನ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಕೆ.ವಿ. ಅರುಣ್, ಕೆ.ಆರ್.ರೋಹಿಣಿ, ಎ.ಸಿ. ಶಾಂತಿ, ಕಾರ್ಯದರ್ಶಿ ಎಂ.ಎಸ್.ಗಣೇಶ್, ಸಹ ಕಾರ್ಯದರ್ಶಿ ಎಸ್.ಆರ್.ಶಿವಲಿಂಗ, ಸದಸ್ಯ ಎಂ.ಎಸ್.ಕುಮಾರ್, ಲಯನ್ಸ್ ಕ್ಲಬ್ ನ ವಲಯಾಧಿಕಾರಿ ಸುಮನ್, ಕಾರ್ಯದರ್ಶಿ ನಿತಿನ್, ಖಜಾಂಚಿ ಕಿರಣ್, ಕ್ಲಬ್ ನ ಮಾಜಿ ಅಧ್ಯಕ್ಷ ಕೊಡಗನ ಹರ್ಷ, ಸದಸ್ಯ ಸತೀಶ್, ಸಮಿತಿ ಸದಸ್ಯರು,ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು. ಜಾಥಾದಲ್ಲಿ ವಿದ್ಯಾರ್ಥಿಗಳು ಹಸಿರು ದೀಪಾವಳಿ ಆಚರಣೆ ಕುರಿತ ಭಿತ್ತಿಫಲಕಗಳನ್ನು ಹಿಡಿದು ವಿವಿಧ ಘೋಷಣೆಗಳನ್ನು ಪ್ರಚುರಪಡಿಸಿದರು. ವಿದ್ಯಾರ್ಥಿಗಳು ಹಣತೆ ಬೆಳಗಿಸಿ ದೀಪಾವಳಿ ಆಚರಿಸಿ, ಪಟಾಕಿ ತ್ಯಜಿಸಿ ಮಾಲಿನ್ಯ ತಡೆಯಿರಿ, ನಮ್ಮ ನಡೆ ಹಸಿರೆಡೆಗೆ ಎಂಬಿತ್ಯಾದಿ ಘೋಷಣೆಗಳನ್ನು ಕೂಗುವ ಮೂಲಕ ನಾಗರಿಕರ ಗಮನ ಸೆಳೆದರು.