ಸೋಮವಾರಪೇಟೆ NEWS DESK ಅ.31 : ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ನ.1 ರಂದು 17ನೇ ವರ್ಷದ ಅದ್ಧೂರಿ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ವೇದಿಕೆ ಸಿದ್ದಗೊಂಡಿದೆ. ಶುಕ್ರವಾರ ಬೆಳಿಗ್ಗೆ 7-30ಕ್ಕೆ ಆಟೋ ನಿಲ್ದಾಣದಲ್ಲಿ ಧ್ವಜಾರೋಹಣ ನೆರವೇರಲಿದೆ. ನಂತರ ಆಸ್ಪತ್ರೆಯ ಒಳರೊಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗುತ್ತದೆ. 9ಕ್ಕೆ ಕಕ್ಕೆಹೊಳೆ ಬಳಿಯ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮೆರವಣಿಗೆಯಲ್ಲಿ ತೆರಳಿ ಪಟ್ಟಣದ ಎಲ್ಲ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಗುತ್ತದೆ. 10-30ಕ್ಕೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿನ ಬೃಹತ್ ವೇದಿಕೆಯಲ್ಲಿ ರಾಜ್ಯೋತ್ಸವದ ಕುಣಿಯೋಣು ಬಾರಾ ನೃತ್ಯ ಸ್ಪರ್ಧೆ ಪ್ರಾರಂಭವಾಗಲಿದೆ. ಇದರಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕ ನೃತ್ಯ ಸ್ಪರ್ಧೆ ನಡೆಯುತ್ತದೆ. ಶುಕ್ರವಾರ ಬೆಳಿಗ್ಗೆ ಕೂಡ ನೃತ್ಯ ತಂಡಗಳು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಆಯೋಜಕರು ತಿಳಿಸಿದ್ದಾರೆ. ಸಂಜೆ 6ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ನಂತರ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯನ್ನು ನಡೆಯುತ್ತದೆ. ಸಮಾರೋಪ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕ ಡಾ. ಮಂತರ್ ಗೌಡ, ಸಂಸದ ಯದುವೀರ್, ಮಾಜಿ ಶಾಸಕ ಅಪ್ಪಚ್ಚು ರಂಜನ್, ಅಟೋ ಯೂನಿಯನ್ ಅಧ್ಯಕ್ಷ ಉಮೇಶ್, ಉದ್ಯಮಿಗಳು, ದಾನಿಗಳು ಭಾಗವಹಿಸಲಿದ್ದಾರೆ.