ಸಿದ್ದಾಪುರ NEWS DESK ಅ.31 : ಸಿದ್ದಾಪುರದಲ್ಲಿ ಗ್ಯಾರಂಟಿ ಯೋಜನೆಗಳ ಜಾಗೃತಿ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅವರು ಅರ್ಹ ಫಲಾನುಭವಿಗಳು ಸರಕಾರದ ಸೌಲಭ್ಯಗಳಿಂದ ವಂಚಿತರಾಗಬಾರದು. ಕಾರ್ಯಕರ್ತರು ಯೋಜನೆಗಳ ಯಶಸ್ವೀ ಅನುಷ್ಠಾನದ ಬಗ್ಗೆ ಕಾಳಜಿ ವಹಿಸಬೇಕು ಎಂದರು. ನುಡಿದಂತೆ ನಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರ ಜನಸಾಮಾನ್ಯರಿಗೆ ಅತ್ಯವಶ್ಯಕವಾಗಿರುವ ಯೋಜನೆಗಳನ್ನು ನೀಡಿದೆ. ಪ್ರತಿಯೊಬ್ಬ ಫಲಾನುಭವಿಗೂ ಯೋಜನೆಗಳು ತಲುಪುವಂತಾಗಲು ಕಾರ್ಯಕರ್ತರು ಕೈಜೋಡಿಸಬೇಕು ಎಂದರು. ಗ್ಯಾರಂಟಿ ಯೋಜನೆಗಳಿಂದಲೇ ಜನರು ನೆಮ್ಮದಿಯ ಮತ್ತು ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಗ್ರಾಮೀಣ ಭಾಗದ ಜನರಿಗೂ ಎಲ್ಲಾ ಯೋಜನೆಗಳು ತಲುಪುವಂತಾಗಲು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತಾಂತ್ರಿಕ ಸಮಸ್ಯೆಗಳಿಂದ ಕೆಲವು ಫಲಾನುಭವಿಗಳಿಗೆ ಸೌಲಭ್ಯ ಸಿಗುತ್ತಿಲ್ಲ, ಈ ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯಲಿದೆ ಎಂದು ಧರ್ಮಜ ಉತ್ತಪ್ಪ ವಿಶ್ವಾಸ ವ್ಯಕ್ತಪಡಿಸಿದರು. ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಿ.ವಿ.ಜಾನ್ಸನ್ ಮಾತನಾಡಿ ರಾಜ್ಯದಲ್ಲೇ ಮೊದಲ ಬಾರಿಗೆ ಗ್ರಾಮೀಣ ಭಾಗದ ಜನರಿಗೂ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಜಾಗೃತಿ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತಾಲ್ಲೂಕಿನಾದ್ಯಂತ ಜಾಗೃತಿ ಕಾರ್ಯಕ್ರಮ ಮುಂದುವರೆಯಲಿದೆ ಎಂದರು. ಸಭೆಯಲ್ಲಿ ಆಹಾರ ಇಲಾಖೆ, ಕಂದಾಯ ಇಲಾಖೆ, ಚೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಗಿರಿ ಸತೀಶ್, ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರೇಮ ಗೋಪಾಲ್, ಉಪಾಧ್ಯಕ್ಷ ಪಳನಿ ಸ್ವಾಮಿ, ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರತಿಶ, ಅನುಷ್ಠಾನ ಸಮಿತಿ ಸದಸ್ಯರುಗಳಾದ ಕಾವೇರಮ್ಮ, ಯಮುನಾ, ಹರೀಶ್, ವಿ ಕೆ ಬಶೀರ್, ಗಣೇಶ್, ಸುಕೂರ್ ಸೇರಿದಂತೆ ಪಂಚಾಯಿತಿ ಸದಸ್ಯರುಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.