ಮಡಿಕೇರಿ ನ.5 NEWS DESK : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕೊಡಗು ಜಿಲ್ಲೆಯಲ್ಲಿ ಚುರುಕುಗೊಂಡಿದೆ. ಇದೇ ನ.20 ರವರೆಗೆ ಕೊಡಗು ಜಿಲ್ಲೆಯಾದ್ಯಂತ ಲಸಿಕಾ ಕಾರ್ಯಕ್ರಮ ನಡೆಯುತ್ತಿದ್ದು, ಈ ಸಂಬಂಧ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಪಶುಪಾಲನಾ ಇಲಾಖೆ ಜಂಟಿ ನಿರ್ದೇಶಕರಾದ ಡಾ.ಪ್ರಸನ್ನ ಕುಮಾರ್ ಅವರು ಮಂಗಳವಾರ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ನಿಯಂತ್ರಣದ 6ನೇ ಸುತ್ತಿನ ಲಸಿಕಾ ಅಭಿಯಾನ ನಡೆಯುತ್ತಿದ್ದು, ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ದನ ಮತ್ತು ಎಮ್ಮೆಗೆ ಕಾಲುಬಾಯಿ ರೋಗ ಕಾಣಿಸಿಕೊಳ್ಳಲಿದ್ದು, ಸರ್ಕಾರದ ನಿರ್ದೇಶನದಂತೆ ಜಾನುವಾರುಗಳಿಗೆ ಲಸಿಕೆ ಹಾಕುವಂತೆ ಪಶುಪಾಲನೆ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ. ಕಾಲುಬಾಯಿ ರೋಗ ನಿಯಂತ್ರಿಸಲು ಜಾನುವಾರುಗಳಿಗೆ ಲಸಿಕೆ ನೀಡುವುದು ಅತ್ಯಗತ್ಯವಾಗಿದೆ. ಈ ರೋಗದ ವಿರುದ್ಧ ಪ್ರತೀ 6 ತಿಂಗಳಿಗೊಮ್ಮೆ ಜಾನುವಾರುಗಳಿಗೆ ಲಸಿಕೆ ಕೊಡಿಸಿ ರೋಗ ಬರದಂತೆ ತಡೆಯುವುದು ಅತ್ಯಗತ್ಯವಾಗಿದೆ ಎಂದು ಹೇಳಿದ್ದಾರೆ. ರಾಷ್ಟ್ರೀಯ ಕಾಲುಬಾಯಿ ಜ್ವರ ನಿಯಂತ್ರಣ ಕಾರ್ಯಕ್ರಮದ ಅಭಿಯಾನದಲ್ಲಿ 6ನೇ ಸುತ್ತಿನಲ್ಲಿ ಲಸಿಕೆ ವಿತರಣೆಗಾಗಿ ಈಗಾಗಲೇ 57 ಸಾವಿರ ಲಸಿಕೆ ಪೂರೈಕೆಯಾಗಿದೆ. ಈಗಾಗಲೇ 5 ನೇ ಸುತ್ತಿನಲ್ಲಿ 2,450 ಲಸಿಕೆ ಉಳಿದಿದ್ದು, ಒಟ್ಟು 59,450 ಲಸಿಕೆ ದಾಸ್ತಾನು ಇದೆ ಎಂದು ಪಶುಪಾಲನೆ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ಅವರು ಮಾಹಿತಿ ನೀಡಿದರು. ಕೊಡಗು ಜಿಲ್ಲೆಯಲ್ಲಿ ಪಶು ವೈದ್ಯಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ನೀಡುತ್ತಿದ್ದು, ರೈತರು, ಜಾನುವಾರು ಮಾಲೀಕರು ಜಾನುವಾರುಗಳಿಗೆ ಲಸಿಕೆ ನೀಡಲು ಸಹಕರಿಸುವಂತೆ ಮನವಿ ಮಾಡಿದರು. ಜಿಲ್ಲೆಯಲ್ಲಿ 20 ನೇ ಜಾನುವಾರು ಗಣತಿಯಂತೆ ದನ ಹಾಗೂ ಎಮ್ಮೆಗಳ ಸಂಖ್ಯೆ 76,920 ಇದ್ದು, ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಲಸಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಇದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಲಸಿಕಾದಾರರು ಜಾನುವಾರು ಮಾಲೀಕರ ಮನೆಗೆ ಬಂದಾಗ ಸಹಕಾರ ನೀಡಿ ನಾಲ್ಕು ತಿಂಗಳ ಮೇಲ್ಪಟ್ಟ ಎಲ್ಲಾ ದನ, ಎಮ್ಮೆಗಳಿಗೆ ಲಸಿಕೆ ಹಾಕಿಸುವಂತೆ ಕೋರಿದರು. 6ನೇ ಸುತ್ತಿಗೆ ಈಗಾಗಲೇ 70 ಸಾವಿರ ಸಿರಿಂಜ್ ಪೂರೈಕೆಯಾಗಿದೆ. ಕಾಲುಬಾಯಿ ಲಸಿಕಾ ಕಾರ್ಯಕ್ರಮ ಕೈಗೊಳ್ಳಲು ಜಿಲ್ಲೆಯಲ್ಲಿ 13 ತಾಂತ್ರಿಕ ಅಧಿಕಾರಿಗಳು, 31 ಅರೆ ತಾಂತ್ರಿಕ ಸಿಬ್ಬಂದಿಗಳು, 7 ಡಿ ದರ್ಜೆ ನೌಕರರು, 13 ಹೊರಗುತ್ತಿಗೆ ನೌಕರರು, 4 ಮೈತ್ರಿ ಸಿಬ್ಬಂದಿ, ಒಬ್ಬ ಕೆಎಂಎಫ್ ಒಟ್ಟು 69 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಲಿಂಗರಾಜ ದೊಡ್ಡಮನಿ ಅವರು ವಿವರಿಸಿದರು. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವು ಅಕ್ಟೋಬರ್ 21 ರಿಂದ ಆರಂಭವಾಗಿದ್ದು, ಇದುವರೆಗೆ ಶೇ.36 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಪಶುಪಾಲನೆ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ಅವರು ತಿಳಿಸಿದ್ದಾರೆ.