ಮಡಿಕೇರಿ ನ.7 NEWS DESK : ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ನುಡಿನೃತ್ಯ ಸಂಭ್ರಮ-2024 ನುಡಿಹಬ್ಬವನ್ನು ಆಚರಿಸಲಾಗುತ್ತಿದ್ದು, ಇದರ ಪ್ರಯುಕ್ತ ವಿದ್ಯಾರ್ಥಿಗಳಿಗೆ ಅಂತರ ಕಾಲೇಜು ನೃತ್ಯ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕಾಲೇಜಿನ ಕನ್ನಡ ಭಾಷಾ ವಿಭಾಗದ ಮುಖ್ಯಸ್ಥ ಅರ್ಜುನ್ ಮೌರ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ಸೈಂಟ್ ಆನ್ಸ್ ಕಾಲೇಜು, ಕನ್ನಡ ಭಾಷಾ ವಿಭಾಗ ಮತ್ತು ವಿರಾಜಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ನ.19 ರಂದು ಕಾಲೇಜಿನಲ್ಲಿ ಕನ್ನಡ ಸಂಸ್ಕೃತಿ ಪರಂಪರೆ, ಸ್ಥಳೀಯ ಜಾನಪದ ಸ್ವರೂಪ ಬಿಂಬಿಸುವ ವಸ್ತು ಪ್ರದರ್ಶನ ನಡೆಯಲಿದ್ದು, ಇದರಲ್ಲಿ ಕಾಲೇಜಿನ ಪ್ರತಿ ತರಗತಿಯ ವಿದ್ಯಾರ್ಥಿಗಳು ಜಾನಪದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸ್ತಬ್ಧ ಚಿತ್ರ, ಹಳೆಯ ಸಾಮಗ್ರಿಗಳು ಸೇರಿದಂತೆ ವಿವಿಧ ವಸ್ತುಗಳನ್ನು ಪ್ರದರ್ಶಿಸಲಿದ್ದು, ಇದು ಸ್ಪರ್ಧೆಯ ರೂಪದಲ್ಲಿ ನಡೆಯಲಿದೆ. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಗುದೆಂದರು. ನ.20 ರಂದು ಕೊಡಗಿನ ಪದವಿ, ತತ್ಸಮಾನ ಹಾಗೂ ಸ್ನಾತಕೋತ್ತರ ಪದವಿ, ತತ್ಸಮಾನ ವಿದ್ಯಾರ್ಥಿಗಳಿಗೆ ಅಂತರ ಕಾಲೇಜು ನೃತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ನುಡಿನೃತ್ಯ ಸ್ಪರ್ಧೆಯನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಉದ್ಘಾಟಿಸಲಿದ್ದು, ವಿರಾಜಪೇಟೆ ತಾಲ್ಲೂಕು ಕ.ಸಾ.ಪ ಅಧ್ಯಕ್ಷ ರಾಜೇಶ್ ಪದ್ಮನಾಭ, ಕೊಡಗು ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಸುರೇಶ್ ಎಂ, ವಿರಾಜಪೇಟೆ ಪುರಸಭೆ ಅಧ್ಯಕ್ಷರಾದ ದೇಚಮ್ಮ, ಕಾಲೇಜಿನ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ರೂ.5,000 ನಗದು ಹಾಗೂ ಆಕರ್ಷಕ ಪಾರಿತೋಷಕ, ದ್ವಿತೀಯ ರೂ.3,000 ನಗದು ಹಾಗೂ ಆಕರ್ಷಕ ಪಾರಿತೋಷಕ ನೀಡಲಾಗುವುದು. ಭಾಗವಹಿಸಿದ ಎಲ್ಲಾ ತಂಡಗಳಿಗೆ ಪ್ರಮಾಣಪತ್ರ ವಿತರಿಸಲಾಗುವುದು. ಕೊಡಗಿನ ಪ್ರತೀ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ನೃತ್ಯ ಸ್ಪರ್ಧೆಯ ವಿವರ ಹಾಗೂ ನಿಯಮಗಳಿಗೆ ಸಂಬಂಧಿಸಿದಂತೆ ಈಗಾಗಲೇ ಪತ್ರವನ್ನು ರವಾನಿಸಲಾಗಿದೆ. ಸ್ಪರ್ಧೆಗೆ ಒಂದು ಕಾಲೇಜಿನಿಂದ ಒಂದು ತಂಡಕ್ಕೆ ಮಾತ್ರ ಭಾಗವಹಿಸಲು ಅವಕಾಶವಿದ್ದು, ವಿದ್ಯಾರ್ಥಿಗಳು ನ.15 ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಅರ್ಜುನ್ ಮೌರ್ಯ ತಿಳಿಸಿದರು. ಹೆಚ್ಚಿನ ಮಾಹಿತಿ ಹಾಗೂ ತಂಡದ ನೋಂದಣಿಗಾಗಿ 9481113469 ಸಂಪರ್ಕಿಸಬಹುದಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಕನ್ನಡ ವಿಭಾಗದ ಸಹಪ್ರಧ್ಯಾಪಕರಾದ ಪ್ರತಿಮಾ ರೈ, ವಿದ್ಯಾರ್ಥಿ ಬಳಗದ ಅಧ್ಯಕ್ಷ ಜೇಕಬ್ ಲಿಬಿನ್, ವಿರಾಜಪೇಟೆ ತಾಲ್ಲೂಕು ಕಸಾಪ ಗೌರವ ಕಾರ್ಯದರ್ಶಿ ಹೆಚ್.ಜಿ.ಸಾವಿತ್ರಿ ಹಾಗೂ ಕೋಶಾಧಿಕಾರಿ ಶಬರೀಶ್ ಶೆಟ್ಟಿ ಉಪಸ್ಥಿತರಿದ್ದರು.