ಮಡಿಕೇರಿ ನ.20 NEWS DESK : ವಕ್ಫ್ ಮಂಡಳಿಯ ನೀತಿಯನ್ನು ಖಂಡಿಸಿ ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ನ.22 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ “ನಮ್ಮ ಭೂಮಿ, ನಮ್ಮ ಹಕ್ಕು” ಎಂಬ ಘೋಷವಾಕ್ಯದೊಂದಿಗೆ ನಗರದ ಶ್ರೀ ಚೌಡೇಶ್ವರಿ ದೇವಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ನಂತರ ಸಂಜೆ 5 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ರಾಜ್ಯದ ಪ್ರಮುಖರು, ಸಂಸದರು ಹಾಗೂ ಜಿಲ್ಲೆಯ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು, ಪ್ರಮುಖರು ಭಾಗವಹಿಸಲಿದ್ದು, ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬಿಜೆಪಿಯ ಜನಪರ ಹೋರಾಟಕ್ಕೆ ಬೆಂಬಲ ಸೂಚಿಸುವಂತೆ ನಾಪಂಡ ರವಿ ಕಾಳಪ್ಪ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ.ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಿಧಾನ ಪರಿಷತ್ ಮಾಜಿ ಸದಸ್ಯ ಸುನೀಲ್ ಸುಬ್ರಮಣಿ, ಪ್ರಮುಖರಾದ ಕಾಂಗೀರ ಸತೀಶ್ ಉಪಸ್ಥಿತರಿದ್ದರು.