ಮಡಿಕೇರಿ ನ.20 NEWS DESK : ನವೆಂಬರ್ 19 ರಿಂದ ಡಿಸೆಂಬರ್ 05 ರವರೆಗೆ ಜಿಲ್ಲೆಯಾದ್ಯಂತ ‘ನಮ್ಮ ಶೌಚಾಲಯ ನಮ್ಮ ಗೌರವ’ ವಿಶೇಷ ಆಂದೋಲನ ನಡೆಯಲಿದೆ ಎಂದು ಕೊಡಗು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಚ್ಛ ಭಾರತ್ ಮಿಷನ್(ಗ್ರಾ.) ಯೋಜನೆಯಡಿಯಲ್ಲಿ ಈ ಆಂದೋಲನ ಜಿಲ್ಲೆಯಾದ್ಯಂತ ನಡೆಯಲಿದೆ ಎಂದರು. ಪ್ರತಿ ನಾಗರಿಕರು ಸಹ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ದೈನಂದಿನ ಜೀವನದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜೊತೆಗೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು. ಗ್ರಾಮೀಣ ಜನರಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವದ ಬಗ್ಗೆ ಅರಿವು ಮೂಡಿಸಿ ಪ್ರತಿಯೊಬ್ಬರು ಶೌಚಾಲಯ ಬಳಸುವಂತೆ ಪ್ರೇರೇಪಿಸಲು ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಸಹಕಾರಿಯಾಗಲಿದೆ ಎಂದರು. ಜಿಲ್ಲೆಯಲ್ಲಿ ಶೌಚಾಲಯ ರಹಿತ ಕುಟುಂಬಗಳಿದ್ದರೆ ಅವರನ್ನು ಗುರುತಿಸಿ ಅರ್ಹ ಫಲಾನುಭವಿಗಳಿಗೆ ಶೌಚಾಲಯ ನಿರ್ಮಿಸಿಕೊಡಬೇಕು. ಪ್ರವಾಸಿ ತಾಣಗಳಲ್ಲಿರುವ ಶೌಚಾಲಯಗಳು ಹಾಗೂ ಇತರೆ ಸಾರ್ವಜನಿಕ ಶೌಚಾಲಯಗಳನ್ನು ಉತ್ತಮವಾಗಿ ನಿರ್ವಹಿಸಬೇಕು ಎಂದು ಆನಂದ್ ಪ್ರಕಾಶ್ ಮೀನಾ ಅವರು ಹೇಳಿದರು. ಸ್ವಚ್ಛ ಭಾರತ್ ಮಿಷನ್ (ಗ್ರಾ.) ಯೋಜನೆಯ ಜಿಲ್ಲಾ ಸಮಾಲೋಚಕರಾದ ಹರ್ಷಿತ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಕಾರ್ಯಕ್ರಮದ ಜೊತೆ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಅಭಿಯಾನದ ರೂಪು ರೇμÉಯ ಕುರಿತು ಚರ್ಚಿಸಲಾಯಿತು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಿ.ಧನರಾಜು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸುರೇಶ್ ಕುಮಾರ್, ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ (ಗ್ರಾ.) ಯೋಜನೆಯ ಜಿಲ್ಲಾ ಸಮಾಲೋಚಕರು ಇತರರು ಇದ್ದರು.