ಮಡಿಕೇರಿ ನ.21 NEWS DESK : ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ನ.23 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನಿಡ್ತ, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಮತ್ತು ಚೆಟ್ಟಳ್ಳಿ, ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಮತ್ತು ಕುಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಎಲ್ಲಾ ವಿಧದ ಮದ್ಯ ತಯಾರಿಕೆ, ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ನೀತಿ ಸಂಹಿತೆಯು ಜಾರಿಯಲ್ಲಿರುವ ಪ್ರದೇಶಗಳಲ್ಲಿರುವ ಎಲ್ಲಾ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅದಿಭೋಗದಾರರು ಮತ್ತು ಸಂದರ್ಭಾನುಸಾರ ಮುಚ್ಚತಕ್ಕದ್ದು ಹಾಗೂ ಮೊಹರು ಮಾಡಿ ಕೀಯನ್ನು ಜಿಲ್ಲಾಧಿಕಾರಿಗಳಿಗೆ ಅಥವಾ ಅಧಿಕಾರ ವ್ಯಾಪ್ತಿಯುಳ್ಳ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರಿಗೆ ಒಪ್ಪಿಸತಕ್ಕದ್ದು. ಈ ಆದೇಶವು ಉಪ ಚುನಾವಣೆ ನಡೆಯುವ ಸಂಬಂಧಪಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನ.23 ರವರೆಗೆ ಅಥವಾ ನೀತಿ ಸಂಹಿತೆ ಜಾರಿಯಲ್ಲಿರುವವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ಅನ್ವಯಿಸುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.