ಮಡಿಕೇರಿ NEWS DESK ನ.22 : ಭಾರತೀಯ ಸೇನೆಯಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿರುವ ಶ್ರೀವತ್ಸ ಭಟ್ ಎಂಬ ಹೆಸರಿನ ಖಾತೆಯ ಕಿಡಿಗೇಡಿಯನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ನಾಪೋಕ್ಲು ಕೊಡವ ಸಮಾಜ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡವ ಸಮಾಜದ ಅಧ್ಯಕ್ಷ ಎಂ.ಸಿ.ನಾಣಯ್ಯ ಹಾಗೂ ಆಡಳಿತ ಮಂಡಳಿ ಇಡೀ ದೇಶವೇ ಗೌರವದಿಂದ ಕಾಣುವ ಅಪ್ರತಿಮ ವೀರರಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಅವಮಾನಿಸಿರುವುದು ಖಂಡನೀಯ. ಭಾರತೀಯ ಸೇನೆಯನ್ನು ಕಟ್ಟಿ ಬೆಳೆಸಿದ ದೇಶಭಕ್ತ ವೀರ ಸೇನಾನಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವುದು ದೇಶದ್ರೋಹವಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಿಡಿಗೇಡಿಯ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ದೇಶಸೇವೆಯನ್ನು ಇಡೀ ದೇಶವೇ ಕೊಂಡಾಡುತ್ತಿದೆ. ಇವರ ಬಗ್ಗೆ ತಪ್ಪು ಅಭಿಪ್ರಾಯಗಳನ್ನು ಮೂಡಿಸಿರುವ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡುವ ಅಗತ್ಯವಿದೆ. ವೀರ ಸೇನಾನಿಗಳನ್ನು ಅಗೌರವದಿಂದ ಕಂಡಿರುವುದಲ್ಲದೆ ಕೊಡವರನ್ನು ಉಲ್ಲೇಖಿಸಿ ಅವಮಾನಿಸಲಾಗಿದೆ. ಇದನ್ನು ಕೂಡ ಸಹಿಸಲು ಸಾಧ್ಯವಿಲ್ಲ, ಸಮಾಜಿಕ ಜಾಲತಾಣವನ್ನು ದುರುಪಯೋಗಪಡಿಸಿಕೊಂಡು ಸೇನಾಧಿಕಾರಿಗಳನ್ನು ಹಾಗೂ ಕೊಡವರನ್ನು ಅಪಮಾನಿಸಿರುವ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಹೋರಾಟ ನಡೆಸುವುದಾಗಿ ಎಂ.ಸಿ.ನಾಣಯ್ಯ ಎಚ್ಚರಿಕೆ ನೀಡಿದ್ದಾರೆ.









