ಮಡಿಕೇರಿ ನ.23 NEWS DESK : ಕೊಡಗಿನ ಹೆಮ್ಮೆಯ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ಹಾಕಿರುವ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಸಿ, ದೇಶ ದ್ರೋಹದ ಪ್ರಕರಣ ದಾಖಲಿಸಬೇಕೆಂದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕೀಲ ವೃತ್ತಿ ಎನ್ನುವುದು ಅತ್ಯಂತ ಘನತೆ ಗೌರವಗಳನ್ನು ಹೊಂದಿರುವ ವೃತ್ತಿ. ಇಂತಹ ವೃತ್ತಿಯಲ್ಲಿರುವ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ವೀರ ಸೇನಾನಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿರುವ ಬಗ್ಗೆ ಮಡಿಕೇರಿ ವಕೀಲರ ಸಂಘ ಅಗತ್ಯ ಕ್ರಮಕ್ಕೆ ಮುಂದಾಗಬೇಕೆಂದು ಒತ್ತಾಯಿಸಿದರು. ಫೀ.ಮಾ. ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರನ್ನು ಇಡೀ ರಾಷ್ಟ್ರ ಅತ್ಯಂತ ಗೌರವದಿಂದ ಕಾಣುತ್ತದಲ್ಲದೆ, ವಿಶ್ವದಾದ್ಯಂತ ಗೌರವಾದರಗಳಿವೆ. ಇಂತಹವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನೀಡಿರುವ ಹೇಳಿಕೆ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತ್ತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಆರೋಪಿಯ ಹಿನ್ನೆಲೆಯನ್ನು ಪೊಲೀಸರು ಪರಿಶೀಲಿಸಿ ದೇಶದ ಭದ್ರತಾ ಕಾಯ್ದೆಯ ಅನ್ವಯ ಪ್ರಕರಣ ದಾಖಲಿಸಬೇಕಿತ್ತೆಂದು ಅಭಿಪ್ರಾಯಪಟ್ಟರು.
::: ಗಡಿಪಾರಿಗೆ ಆಗ್ರಹ ::: ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ವೀರ ಸೇನಾನಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪಿಯನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು ಕೇವಲ ಖಂಡನೆ, ಹೇಳಿಕೆಗಳನ್ನು ನೀಡಿದರಷ್ಟೆ ಸಾಲದು, ಈ ಸಂಬಂಧ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ನೆಲ್ಲೀರ ಚಲನ್, ವಕ್ತಾರ ಬಿ.ಕೆ.ಅರುಣ್ ಕುಮಾರ್ ಹಾಗೂ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ ಉಪಸ್ಥಿತರಿದ್ದರು.