ಮಡಿಕೇರಿ NEWS DESK ನ.23 : ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿದ ಕಿಡಿಗೇಡಿಯನ್ನು ತಕ್ಷಣ ಗಡಿಪಾರು ಮಾಡಬೇಕು ಮತ್ತು ಗುಪ್ತಚರ ಇಲಾಖೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಂತಹ ಭಾರತೀಯ ಸೇನೆಯ ದಂತಕಥೆಗಳ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅವಹೇಳನ ಮಾಡಿರುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ರೀತಿಯ ಬೆಳವಣಿಗೆ ದೇಶಭಕ್ತಿ ಮತ್ತು ರಾಷ್ಟ್ರೀಯವಾದಿ ಶಕ್ತಿಗಳನ್ನು ದುರ್ಬಲಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಡವ ಸಮುದಾಯದ ವಿರುದ್ಧ ಪಿತೂರಿ ನಡೆಸುತ್ತಿದ್ದು, ಬೆದರಿಕೆಯ ಮೂಲಕ ಕೊಡವರ ನೈತಿಕತೆಯನ್ನು ದುರ್ಬಲಗೊಳಿಸುವ ಯತ್ನ ಆತಂಕಕಾರಿಯಾಗಿದೆ. ಗುಪ್ತಚರ ಇಲಾಖೆ ಕಿಡಿಗೇಡಿಯ ಜಾಲವನ್ನು ಪತ್ತೆ ಹಚ್ಚಬೇಕು ಮತ್ತು ದಮನ ಮಾಡಬೇಕು. ಕೊಡಗಿನಿಂದ ಶಾಶ್ವತವಾಗಿ ಗಡಿಪಾರು ಮಾಡಿ ಕೊಡವ ಸಮುದಾಯಕ್ಕೆ ಹೆಚ್ಚಿನ ಹಾನಿಯಾಗದಂತೆ ತಡೆಯಬೇಕು ಮತ್ತು ಸಾಮಾಜಿಕ ಸಾಮರಸ್ಯವನ್ನು ಕಾಪಾಡಬೇಕು. ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರನ್ನು ಅವಮಾನಿಸಿದ ಪ್ರಕರಣವನ್ನು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ಕಿಡಿಗೇಡಿಯನ್ನು ತಕ್ಷಣ ಗಡಿಪಾರು ಮಾಡಬೇಕು ಮತ್ತು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸುತ್ತದೆ ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಭಾರತೀಯ ಸೇನಾ ಇತಿಹಾಸದಲ್ಲಿ ಅತ್ಯಂತ ಪೂಜನೀಯ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಅವರು ಭಾರತೀಯ ಸೇನೆಯ ಮೊದಲ ಭಾರತೀಯ ಕಮಾಂಡರ್-ಇನ್-ಚೀಫ್ ಆಗಿದ್ದರು. 1947 ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಭಾರತದ ವಿಜಯದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಇವರುಗಳನ್ನು ಗೌರವಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.