ಮಡಿಕೇರಿ ನ.26 NEWS DESK : ಪ್ರಸಕ್ತ ಮುಂಗಾರು ಅವಧಿಯಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆ ಹಾಗೂ ಸರ್ಕಾರಿ ಕಟ್ಟಡಗಳು ಹಾನಿಯಾಗಿದ್ದು, ಈ ಸಂಬಂಧ ಕಾಮಗಾರಿ ಕೈಗೊಳ್ಳಲು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ ಶೇ.75 ರಷ್ಟು ಹಣ ಬಿಡುಗಡೆ ಮಾಡಲಾಗಿದೆ. ಆದ್ದರಿಂದ 90 ದಿನದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯನ್ನು ವಿಡಿಯೋ ಸಂವಾದದ ಮೂಲಕ ನಡೆಸಿ ಜಿಲ್ಲಾಧಿಕಾರಿ ಅವರು ಮಾತನಾಡಿದರು. ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಸಲ್ಲಿಸಲಾಗಿದ್ದ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆದಿತ್ತು, ಹಣ ಬಿಡುಗಡೆ ಮಾಡಲಾಗಿದೆ. ಕೂಡಲೇ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಮಾನ್ಯ ಮುಖ್ಯಮಂತ್ರಿ ಅವರು ಆ.2 ರಂದು ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಬಳಿ ರಸ್ತೆ ಕುಸಿದಿದ್ದ ಪ್ರದೇಶಕ್ಕೆ ಭೇಟಿ ಹಾಗೂ ವಿರಾಜಪೇಟೆ ತಾಲ್ಲೂಕಿನ ಕೆದಮಳ್ಳೂರು ಗ್ರಾಮದ ಬಳಿ ರಸ್ತೆ ಕುಸಿದು ಹಾನಿ ಆಗಿದ್ದ ಪ್ರದೇಶಕ್ಕೆ ಭೇಟಿ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದ್ದು, ಈ ಸಂಬಂಧ ಕಾಮಗಾರಿಗಳನ್ನು ಆದ್ಯತೆ ಮೇಲೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ತಹಶೀಲ್ದಾರರು ಕಾಮಗಾರಿಯನ್ನು ಕಾಲ ಕಾಲಕ್ಕೆ ವೀಕ್ಷಿಸಿ ವರದಿ ನೀಡುವಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಮೂರನೇ ಪಾರ್ಟಿಯಿಂದಲೂ ಸಹ ಕಾಮಗಾರಿ ಸಂಬಂಧ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಮನೆ ಹಾನಿ ಸಂಬಂಧಿಸಿದಂತೆ ಕಂದಾಯ ಸಚಿವರ ಆದೇಶದಂತೆ ಕಾಮಗಾರಿ ಕೈಗೊಳ್ಳಬೇಕು. ಪ್ಯಾಕೇಜ್ ವರ್ಕ್ ಸೇರಿದಂತೆ ಎಲ್ಲಾ ಕೆಲಸಗಳನ್ನು ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು. ಇದೇ 30 ರಂದು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಕೆಡಿಪಿ ಸಭೆಗೆ ಅಧಿಕಾರಿಗಳು ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು. ಪಂಚಾಯತ್ ರಾಜ್ ಎಂಜಿನಿಯರ್ ನಾಯಕ್, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಮುತ್ತುರಾಜ್ ಅವರು ಹಲವು ಮಾಹಿತಿ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ವಿಡಿಯೋ ಸಂವಾದಲ್ಲಿ ಪಾಲ್ಗೊಂಡಿದ್ದರು.