ಮಡಿಕೇರಿ ನ.28 NEWS DESK : ಕೊಡಗು ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ವಾರ್ಷಿಕ ಮಹಾಸಭೆಯು ನಗರದ ಮಯೂರ ವ್ಯಾಲಿ’ ಹೊಟೇಲು ಸಭಾಂಗಣದಲ್ಲಿ ನಡೆಯಿತು. ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಜರುಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕೆಲವು ಸುತ್ತೋಲೆಗಳಿಂದ ಖಾಸಗಿ ಶಾಲೆಗಳಿಗೆ ಆಗುತ್ತಿರುವ ಅನಾನುಕೂಲದ ಬಗ್ಗೆ ಚರ್ಚಿಸಲಾಯಿತು. ಖಾಸಗಿ ಶಾಲೆಗಳ ನಿಯಮಾನುಸಾರ, ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಹಾಗೂ ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಒಕ್ಕೂಟದ ಜೊತೆ ನಿಕಟ ಸಂಪರ್ಕ ಇಟ್ಟುಕೊಂಡು ಸರ್ಕಾರದೊಂದಿಗೆ ರಾಜ್ಯಮಟ್ಟದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ತಿರ್ಮಾನಿಸಲಾಯಿತು. ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಲ್ಯಾಣ ನಿಧಿಗಳಿಂದ ನೀಡಲಾಗುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸೂಚಿಸಲಾಯಿತು. ಶಾಲೆಗಳ ಕಟ್ಟಡ ಸುರಕ್ಷತೆ, ಅಗ್ನಿ ಸುರಕ್ಷತೆಯ ನಿಯಮಾವಳಿಗಳಲ್ಲಿ ಸಡಲಿಕೆ ಮಾಡಿರುವುದರಿಂದ ಶಾಲೆಗಳು ಮಕ್ಕಳ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ತಿಳಿಸಲಾಯಿತು. ಸದಸ್ಯರಾದ ಜಿ.ಹೆಚ್. ಮೊಹಮದ್ ಹನೀಫ್ ಸೂಚಿಸಿದ ಮೇರೆಗೆ ರಾಜ್ಯ ಹಾಗೂ ಕೇಂದ್ರ ಸರಕಾರದ ಬಜೆಟ್‌ನಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಡಲು ಸಲಹೆ ನೀಡುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಯಂ.ಟಿ.ದಾಮೋದರ್, ಕಾನೂನು ಸಲಹೆಗಾರ ಎಂ.ಎಸ್. ಪೂವಯ್ಯ, ಜಿಲ್ಲೆಯ ಎಲ್ಲಾ ಖಾಸಗಿ ವಿದ್ಯಾಸಂಸ್ಥೆಗಳ ಸಂಸ್ಥಾಪಕರು ಹಾಜರಿದ್ದರು. ಜಿಲ್ಲಾ ಒಕ್ಕೂಟದ ಕಾರ್ಯದರ್ಶಿ ಕೋಟ್ರಂಗಡ ತಿಮ್ಮಯ್ಯ ಸ್ವಾಗತಿಸಿ, ವಂದಿಸಿದರು.