ಮಡಿಕೇರಿ ನ.30 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ, ಮಡಿಕೇರಿ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಆಶ್ರಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಸ್ಪರ್ಧೆ ಮತ್ತು 2023-24ನೇ ಸಾಲಿನ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗೆ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ನಗರದ ಲಯನ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ದೊಡ್ಡೇಗೌಡ ಉದ್ಘಾಟಿಸಿದರು. ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಲೋಕನಾಥ ಅಮೆಚೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ 10ನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ಮಾದಾಪುರದ ಚನ್ನಮ್ಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯು.ಅದವಿಯ ಗೆ ಟಿ.ಪಿ.ರಮೇಶ್ ದತ್ತಿನಿಧಿ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಟ್ರಸ್ಟ್ ಅಧ್ಯಕ್ಷರಾದ ಅಂಬೆಕಲ್ ನವೀನ್, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಪ್ರಧಾನ ಕಾರ್ಯದರ್ಶಿ ಭಾರತಿ ರಮೇಶ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನಿರ್ ಅಹಮದ್ ಹಾಜರಿದ್ದರು.