ಮಡಿಕೇರಿ NEWS DESK ನ.30 : ಮಳೆಗಾಲ ಮುಗಿದಿರುವ ಹಿನ್ನೆಲೆ ಜಿಲ್ಲೆಯ ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆ ಕಾಮಗಾರಿಯನ್ನು ಕೂಡಲೇ ಕೈಗೊಳ್ಳುವಂತೆ ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಸಕ್ತ (2024-25) ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಸಂಬಂಧ ಶನಿವಾರ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಸಿವಿಲ್ ಕಾಮಗಾರಿಗಳನ್ನು ಕೈಗೊಳ್ಳಲು ನವೆಂಬರ್ ಡಿಸೆಂಬರ್, ಜನವರಿ, ಫೆಬ್ರವರಿ, ಮಾರ್ಚ್ ಈ ಐದು ತಿಂಗಳು ಸೂಕ್ತವಾಗಿದ್ದು, ಈ ಹಿನ್ನೆಲೆ ಮಳೆಹಾನಿ ಕಾಮಗಾರಿಗಳು ಸೇರಿದಂತೆ ರಸ್ತೆ ಕಾಮಗಾರಿಗಳನ್ನು ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಾಕೀತು ಮಾಡಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ವಿರಾಜಪೇಟೆ-ಮಡಿಕೇರಿ ಮಾರ್ಗದ ರಸ್ತೆಯ ಗುಂಡಿ ಮುಚ್ಚುವ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕು ಎಂದರು. ಮಡಿಕೇರಿ ವಿದಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಸರ್ಕಾರ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಎರಡು ವಿಧಾನಸಭಾ ಕ್ಷೇತ್ರಕ್ಕೆ ತಲಾ 20 ಕೋಟಿ ರೂ. ಬಿಡುಗಡೆ ಮಾಡಿದ್ದು, ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳು ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು. ಇದಕ್ಕೆ ಧ್ವನಿಗೂಡಿಸಿದ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಅವರು ಜಿಲ್ಲೆಯ ಗುಂಡಿ ಬಿದ್ದಿರುವ ರಸ್ತೆಯನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ಅನುಸರಿಸಬಾರದು ಎಂದು ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಎಂಜಿನಿಯರ್‌ಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಮಾದಾಪುರ, ಜಂಬೂರು ರಸ್ತೆ ಅಭಿವೃದ್ಧಿಗೆ ತಲಾ 50 ಲಕ್ಷ ರೂ. ಬಿಡುಗಡೆಯಾಗಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಆದರೆ ಇದುವರೆಗೆ ಕಾಮಗಾರಿ ಆರಂಭಿಸಿಲ್ಲ ಎಂದು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಈ ಕುರಿತು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಮಳೆಗಾಲ ಮುಗಿದಿದೆ, ಇಂತಹ ಸಂದರ್ಭದಲ್ಲಿಯೂ ಕೆಲಸ ಆಗದಿದ್ದರೆ ಹೇಗೆ ಎಂದು ಪ್ರಶ್ನಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಗುತ್ತಿಗೆ ಪಡೆದು ಕಾಮಗಾರಿಗೆ ಚಾಲನೆ ನೀಡಿದ್ದರೂ ಸಹ ಕಾಮಗಾರಿಗೆ ವಿಳಂಬ ಮಾಡುತ್ತಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಸೂಚಿಸಿದರು. ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ವಿಳಂಬ ಮಾಡಿದ್ದಲ್ಲಿ ತಮ್ಮ ವಿರುದ್ಧವೇ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚರಿಸಿದರು. ಭಾಗಮಂಡಲ-ಕರಿಕೆ ರಸ್ತೆ ಅಭಿವೃದ್ಧಿಗೆ 12 ಕೋಟಿ ರೂ. ಬಿಡುಗಡೆಯಾಗಿದ್ದು, ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಜಿಲ್ಲೆಯ ಗಿರಿಜನ ಹಾಡಿಗಳಲ್ಲಿ ವಾಸಿಸುವ ಆದಿವಾಸಿಗಳಿಗೆ ಒಂದು ಹಕ್ಟೇರ್ ಒಳಗಿನ ಪ್ರದೇಶದಲ್ಲಿ ಕುಡಿಯುವ ನೀರು, ರಸ್ತೆ, ವಿದ್ಯುತ್, ಅಂಗನವಾಡಿ ಮತ್ತಿತರ ಮೂಲ ಸೌಲಭ್ಯವನ್ನು ಕಲ್ಪಿಸುವಂತೆ ಮುಖ್ಯಮಂತ್ರಿ ಅವರು ಇತ್ತೀಚೆಗೆ ನಡೆದ ಸಭೆಯಲ್ಲಿ ನಿರ್ದೇಶನ ನೀಡಿದ್ದಾರೆ. ಆದರೂ ಸಹ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸುತ್ತಿರುವುದು ಏಕೆ ಎಂದು ಎ.ಎಸ್.ಪೊನ್ನಣ್ಣ ಅವರು ಸಿಟ್ಟಾದರು. ಆದಿವಾಸಿಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು. ಮುಂದಿನ ದಿನಗಳಲ್ಲಿ ತೊಂದರೆ ನೀಡಿದರೆ ತಕ್ಷಣವೇ ಗಮನಕ್ಕೆ ತರಬೇಕು ಎಂದು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಎ.ಎಸ್.ಪೊನ್ನಣ್ಣ ಅವರು ಸೂಚಿಸಿದರು. 2018 ಮತ್ತು 2019 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಈಗಾಗಲೇ ವಸತಿ ಕಲ್ಪಿಸಲಾಗಿದ್ದು, ಈ ಸಂಬಂಧ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ನೀಡಲಾಗಿದ್ದು, ಪಾರದರ್ಶಕವಾಗಿ ಮನೆ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜ್ ಅವರು ಮಾಹಿತಿ ನೀಡಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ 2018 ಮತ್ತು 2019 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡ ಎಷ್ಟೋ ಸಂತ್ರಸ್ತರಿಗೆ ಇನ್ನೂ ಸಹ ಮನೆ ಸಿಕ್ಕಿಲ್ಲ. ಆದ್ದರಿಂದ ಮನೆ ನೀಡುವಂತಾಗಬೇಕು ಎಂದರು. ಇನ್ಫೋಸಿಸ್ ವತಿಯಿಂದಲೂ ಸಹ 200 ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದ್ದು, ಈ ಮನೆಗಳನ್ನು ಸಹ ಸಂತ್ರಸ್ತರಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಹೆಚ್ಚಿನ ಮಳೆ ಸಂದರ್ಭದಲ್ಲಿ ಪ್ರವಾಹ ಉಂಟಾಗಿ ಸಿದ್ದಾಪುರ ಬಳಿಯ ಕರಡಿಗೋಡು ಗ್ರಾಮದವರು ತೊಂದರೆಗೆ ಸಿಲುಕುತ್ತಿದ್ದು, ಇವರಿಗೆ ನಿವೇಶನ ನೀಡುವ ಸಂಬಂಧ ಪರಿಶೀಲಿಸಲಾಗಿದೆ. ಆದರೆ ಹತ್ತಿರದಲ್ಲಿ ಜಾಗ ಕೇಳುತ್ತಿದ್ದಾರೆ ಎಂದು ಸಚಿವರ ಗಮನಕ್ಕೆ ತಂದರು. ಈ ಕುರಿತು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಕರಡಿಗೋಡು ಗ್ರಾಮಸ್ಥರಿಗೆ ನಿವೇಶನ ನೀಡುವ ಸಂಬಂಧ ಆದ್ಯತೆ ಮೇಲೆ ಕ್ರಮವಹಿಸುವಂತೆ ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್‌ಗೌಡ ಅವರು ತೆಪ್ಪದಕಂಡಿ ಬಳಿ ಗ್ರಾಮಸ್ಥರಿಗೂ ನಿವೇಶನ ಒದಗಿಸುವಂತಾಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಜಿಲ್ಲೆಯಲ್ಲಿನ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತಾಗಲು ಆಯಾಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಗುರುತಿಸಲಾಗುತ್ತಿದ್ದು, ನಿವೇಶನ ಗುರುತಿಸಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗುವುದು. ನಂತರ ಗ್ರಾಮ ಪಂಚಾಯಿತಿ ವತಿಯಿಂದ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ಸುರೇಶ್ ಅವರು ತುಂಬಾ ಜನರಿಗೆ ದಾಖಲಾತಿ ಇಲ್ಲದೆ ಪರಿತಪಿಸುತ್ತಿದ್ದಾರೆ. ಈ ಬಗ್ಗೆ ಪರಿಹಾರ ಒದಗಿಸಬೇಕು ಎಂದು ಸಲಹೆ ಮಾಡಿದರು. ಸಮಿತಿ ಸದಸ್ಯರಾದ ಎಚ್.ಎಂ.ಕಾವೇರಿ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಹಲವು ದಶಕಗಳಿಂದ ಕಾಫಿ ತೋಟಗಳಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿರುವ ಕುಟುಂಬಗಳಿಗೆ ನಿವೇಶನ ಒದಗಿಸುವಂತಾಗಬೇಕು ಎಂದು ಒತ್ತಾಯಿಸಿದರು. ‘ಆದಿವಾಸಿಗಳಿಗೆ ಸರ್ಕಾರದ ಸೌಲಭ್ಯಗಳು ತಲುಪಬೇಕು. ಜೊತೆಗೆ ಕೂಲಿಕಾರ್ಮಿಕರಿಗೂ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವಂತಾಗಬೇಕು. ಇಂದಿಗೂ ಸಹ ಎಷ್ಟೋ ಕುಟುಂಬಗಳು ಸ್ವಂತ ನಿವೇಶನ ಇಲ್ಲದೆ ಕೂಲಿ ಮಾಡಿಕೊಂಡೇ ಜೀವನ ದೂಡುತ್ತಿದ್ದಾರೆ ಎಂದು ಕೆ.ಎಂ.ಕಾವೇರಿ ಅವರು ಗಮನ ಸೆಳೆದರು.’ ಸರ್ಕಾರದ ಆದ್ಯತೆ ಗ್ಯಾರಂಟಿ ಯೋಜನೆಗಳಾಗಿದ್ದು, ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆ ಸಂಬಂಧ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸಲಹೆ ಮಾಡಿದರು. ‘ಇಡೀ ದೇಶದಲ್ಲಿ ಗ್ಯಾರಂಟಿ ಯೋಜನೆ ಮಾದರಿಯಾಗಿದೆ. ಇದನ್ನು ರಾಷ್ಟçದ ಎಲ್ಲೆಡೆ ಜಾರಿಗೊಳಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಕರ್ನಾಟಕ ಮಾದರಿ ರಾಜ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.’ ಅಧಿಕಾರಿಗಳು ಸರ್ಕಾರಕ್ಕೆ ಒಳ್ಳೆಯ ಹೆಸರು ತರುವ ನಿಟ್ಟಿನಲ್ಲಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಅದನ್ನು ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರಬಾರದು. ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಜೊತೆ ಉತ್ತಮ ಒಡನಾಟ ಹೊಂದಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞ ವೈದ್ಯರ ಕೊರತೆ ಇದ್ದು, ವೈದ್ಯರನ್ನು ನಿಯೋಜಿಸುವಂತಾಗಬೇಕು. ಜೊತೆಗೆ ಶುಶ್ರೂಷಕರನ್ನು ನಿಯೋಜಿಸಬೇಕು ಎಂದು ಸದಸ್ಯರಾದ ಸುನಿತಾ ಮಂಜುನಾಥ್ ಅವರು ಮನವಿ ಮಾಡಿದರು. ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳಿಗೆ ಉತ್ತಮ ಚಿಕಿತ್ಸೆ ಹಾಗೂ ಪೌಷ್ಠಿಕ ಆಹಾರ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನಹರಿಸುವಂತೆ ಸಚಿವರು ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್ ಕುಮಾರ್ ಅವರು ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಶಿಕ್ಷಣ ನೀಡುವ ಮೂಲಕ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಕ್ರಮವಹಿಸಲಾಗಿದೆ ಎಂದರು. ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ಹಾನಿ ಸೇರಿದಂತೆ ಮತ್ತಿತರ ಸಂಬಂಧ ಕೃಷಿಕರಿಗೆ ಬಾಕಿ ಇರುವ ಪರಿಹಾರವನ್ನು ಕೂಡಲೇ ನೀಡುವಂತೆ ಅರಣ್ಯ ಅಧಿಕಾರಿಗೆ ಸಚಿವರು ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಅವರು ಕೃಷಿಕರಿಗೆ ಪರಿಹಾರ ವಿತರಿಸಲು 47 ಲಕ್ಷ ರೂ. ಬಿಡುಗಡೆಯಾಗಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ದುಬಾರೆಯಲ್ಲಿ ಪ್ರವಾಸಿಗರ ಪ್ರವೇಶ ಶುಲ್ಕ ಹೆಚ್ಚಳ ಮಾಡಿರುವ ಬಗ್ಗೆ ದೂರುಗಳು ಬರುತ್ತಿದ್ದು, ದರ ಕಡಿಮೆ ಮಾಡುವಂತೆ ಸಲಹೆ ಮಾಡಿದರು. ಈ ಬಗ್ಗೆ ಮಾಹಿತಿ ನೀಡಿದ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಅವರು ವಾರಾಂತ್ಯದಲ್ಲಿ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ ಎಂದರು. ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳುವವರಿಗೆ ಶುಲ್ಕ ಹೆಚ್ಚಳ ಮಾಡಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಈ ಬಗ್ಗೆ ಗಮನಹರಿಸುವಂತೆ ಸಲಹೆ ಮಾಡಿದರು. ಕೆಪಿಟಿಸಿಎಲ್ ವತಿಯಿಂದ ಕೊಡಗು ಜಿಲ್ಲೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿದ್ಯುತ್ ಉಪ ಕೇಂದ್ರಗಳ ಕಾಮಗಾರಿ ಕೂಡಲೇ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿ ಶಾಸಕರಾದ ಮಂತರ್ ಗೌಡ ಅವರು ಬಾಣಾವರದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಶಾಸಕರಾದ ಪೊನ್ನಣ್ಣ ಅವರು ಮಾತನಾಡಿದ ಕೃಷಿಕರಿಗೆ 10 ಹೆಚ್‌ಪಿ ವರೆಗಿನ ಉಚಿತ ವಿದ್ಯುತ್ ಕಲ್ಪಿಸಲು ಗಮನಹರಿಸುವಂತೆ ಸೆಸ್ಕ್ ಎಂಜಿನಿಯರ್‌ಗೆ ಸೂಚಿಸಿದರು. ‘ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಸಮಗ್ರ ಗಿರಿಜನ ಕಲ್ಯಾಣ ಹಾಸ್ಟೆಲ್‌ಗಳ ವಿದ್ಯಾರ್ಥಿಗಳಿಗೆ ಬೆಡ್‌ಶೀಟ್, ಕಾಟ್ ಸೇರಿದಂತೆ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು. ಯಾವುದೇ ದೂರುಗಳು ಕೇಳಿ ಬರದಂತೆ ನೋಡಿಕೊಳ್ಳುವುದು ಇಲಾಖಾ ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.’ ಹಿರಿಯ ಅಧಿಕಾರಿಗಳು ಹಾಸ್ಟೇಲ್‌ಗಳಿಗೆ ದಿಢೀರ್ ಭೇಟಿ ನೀಡಿ ಕುಂದುಕೊರತೆ ಆಲಿಸಬೇಕು. ಸರ್ಕಾರ ಹಾಸ್ಟೇಲ್‌ಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಆದರೂ ಸಹ ದೂರುಗಳು ಕೇಳಿ ಬರುತ್ತಿವೆ ಎಂದು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಕವಿತಾ ಅವರು ಮಾತನಾಡಿ ಹೊಸದಾಗಿ ಹಾಸ್ಟೇಲ್ ಆರಂಭಿಸಲಾಗಿದ್ದು ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯ ಹಾಡಿಗಳಲ್ಲಿ ವಾಸಿಸುವ ಸುಮಾರು 26 ಸಾವಿರ ಜನರಲ್ಲಿ 22 ಸಾವಿರ ಜನರಿಗೆ ಆಧಾರ್ ಕಾರ್ಡ್ ನೀಡಲಾಗಿದೆ. ಉಳಿದಂತೆ 4 ಸಾವಿರ ಜನರಿಗೆ ಆಧಾರ್ ಕಾರ್ಡ್ ನೀಡಬೇಕಿದೆ ಎಂದು ಎಸ್.ಹೊನ್ನೇಗೌಡ ಅವರು ಮಾಹಿತಿ ನೀಡಿದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೆಶಕರಾದ ರಂಗಧಾಮಪ್ಪ ಅವರು ಅವರು ಜಿಲ್ಲೆಯಲ್ಲಿ ಸುಮಾರು 10 ಸಾವಿರ ವಿದ್ಯಾರ್ಥಿಗಳಿಗೆ ಆಧಾರ್ ಗುರುತಿನ ಚೀಟಿ ಮಾಡಿಸಬೇಕಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಹಾಡಿಗಳಲ್ಲಿ ಜೇನುಕುರುಬ, ಬೆಟ್ಟಕುರುಬ, ಕಾಡುಕುರುಬ, ಸೋಲಿಗ, ಎರವ ಮತ್ತಿತರ ಆದಿವಾಸಿಗಳು ವಾಸಿಸುತ್ತಿದ್ದು, ಇವರಿಗೆ ಆಧಾರ್ ಕಾರ್ಡ್ ಮಾಡಿಸಬೇಕಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು 5 ತಾಲ್ಲೂಕು ಕೇಂದ್ರಗಳಲ್ಲಿ ಆಧಾರ್ ಕಾರ್ಡ್ ನೋಂದಣಿಗೆ ಅವಕಾಶ ಮಾಡಬೇಕು ಎಂದು ಸಲಹೆ ಮಾಡಿದರು. ಶಕ್ತಿ ಯೋಜನೆ ಸಂಬAಧಿಸಿದAತೆ ಕೆಲವು ಗ್ರಾಮಗಳಿಗೆ ಬಸ್ಸುಗಳು ಸಂಚರಿಸುತ್ತಿಲ್ಲ ಎಂಬ ಬಗ್ಗೆ ಸಾರ್ವಜನಿಕರ ಮನವಿ ಬರುತ್ತಿದ್ದು, ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಚಿವರು ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಅವರು ಮಡಿಕೇರಿ-ಚೇಯ್ಯಂಡಾಣೆ ಮಾರ್ಗದಲ್ಲಿ ವಾರದಲ್ಲಿ ಮೂರು ದಿನ ಮಾತ್ರ ಬಸ್ ಸಂಚರಿಸುತ್ತಿದ್ದು, ಇದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದೆ ಎಂದರು. ಇದಕ್ಕೆ ಧ್ವನಿಗೂಡಿಸಿದ ಪೊನ್ನಣ್ಣ ಅವರು ಕೂಡಲೇ ಬಸ್ ಕಲ್ಪಿಸುವಂತೆ ಸೂಚಿಸಿದರು. ಈ ಕುರಿತು ಮಾತನಾಡಿದ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ಘಟಕದ ವ್ಯವಸ್ಥಾಪಕರಾದ ಮೆಹಬೂಬ್ ಅಲಿ ಅವರು ಮಡಿಕೇರಿ ಘಟಕದಲ್ಲಿ ಚಾಲಕರ ಕೊರತೆ ಇದ್ದು, ಬಸ್‌ಗಳು ಸಹ ಕಡಿಮೆ ಇದೆ ಎಂದು ಹೇಳಿದರು. ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಶಕ್ತಿ, ಅನ್ನಭಾಗ್ಯ, ಹೀಗೆ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ತಲುಪಿಸುವಂತೆ ಸಚಿವರು ಹೇಳಿದರು. ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಉಸ್ತುವಾರಿ ಸಮಿತಿ ಸದಸ್ಯರಾದ ಎ.ಮಂಜು, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.











