ಮಡಿಕೇರಿ NEWS DESK ಡಿ.1: ಬುಡಕಟ್ಟು ಸಮುದಾಯದ ಮಕ್ಕಳಲ್ಲಿ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ರಕ್ಷಣೆಯೊಂದಿಗೆ ಅವರಲ್ಲಿ ಸುಪ್ತವಾಗಿ ಅಡಗಿರುವ ಸಾಂಸ್ಕೃತಿಕ ಪ್ರತಿಭೆಯನ್ನು ಗುರುತಿಸಿ ಅವರನ್ನು ಶೈಕ್ಷಣಿಕವಾಗಿ ಉತ್ತೇಜಿಸುವ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕದ ವತಿಯಿಂದ ಡಿಸೆಂಬರ್ ಅಂತ್ಯದ ವೇಳೆಗೆ ಕೊಡಗು ಜಿಲ್ಲೆಯಲ್ಲಿ ರಾಜ್ಯಮಟ್ಟದ ಬುಡಕಟ್ಟು ಮಕ್ಕಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಮಾವೇಶವನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಮಡಿಕೇರಿಯಲ್ಲಿ ತಿಳಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಜಿಲ್ಲಾ ಸಂಸ್ಥೆಯ ಮಡಿಕೇರಿ ನಗರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಕುರಿತು ಪದಾಧಿಕಾರಿಗಳೊಂದಿಗೆ ಪರಾಮರ್ಶೆ ನಡೆಸಿದ ನಂತರ ಮಾತನಾಡಿದ ಅವರು ಸಂಸ್ಥೆಯ ವಜ್ರಮಹೋತ್ಸವದ ಅಂಗವಾಗಿ ಪ್ರಸಕ್ತ ಸಾಲಿನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಶಾಲಾ ಮಕ್ಕಳಿಂದ ಕುಶಾಲನಗರದಲ್ಲಿ ಜಿಲ್ಲಾಮಟ್ಟದ Rally ನಡೆಸುವ ಮೂಲಕ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಕಾರ್ಯಕ್ರಮಗಳು ಹಾಗೂ ಪರಿಸರ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳುವುದು, ಡಿಸೆಂಬರ್ ಅಂತ್ಯದೊಳಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ದಳ ನೋಂದಾವಣಿ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು ಎಂದು ಪಿ.ಜಿ.ಆರ್. ಸಿಂಧ್ಯ ಸಲಹೆ ನೀಡಿದರು. ಸಂಸ್ಥೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸುವ ಕುರಿತು ಆತ್ಮಸ್ಥೈರ್ಯ ಬೆಳೆಸಿ ಅವರಲ್ಲಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಬೆಳೆಸುವ ತರಬೇತಿ ಕಾರ್ಯಾಗಾರ ಸಂಘಟಿಸುವಂತೆ ಸಲಹೆ ನೀಡಿದರು. ಸಂಸ್ಥೆಯ ವತಿಯಿಂದ ಜಿಲ್ಲೆಯಲ್ಲಿ ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮಗಳು ಹಾಗೂ ಸೇವಾ ಚಟುವಟಿಕೆಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು. ರಾಜ್ಯ ಸ್ಕೌಟ್ಸ್ ವಿಭಾಗದ ಸಂಘಟಕರೂ ಆದ ಜಿಲ್ಲಾ ಉಸ್ತುವಾರಿ ಸಂಘಟಕ ಪ್ರಭಾಕರ್ ಭಟ್ ಮಾತನಾಡಿ, ಸಂಸ್ಥೆಯ ವತಿಯಿಂದ ವಿವಿಧ ತರಬೇತಿಗಳನ್ನು ಸಂಘಟಿಸುವ ಮೂಲಕ ಮಕ್ಕಳಲ್ಲಿ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ರಾಜ್ಯಮಟ್ಟದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸಬೇಕು ಎಂದರು. ಜಿಲ್ಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಪ್ರಸ್ತುತ ಕೈಗೊಳ್ಳುತ್ತಿರುವ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ಡಿಸೆಂಬರ್ ಮೂರನೇ ವಾರದಲ್ಲಿ ಸಂಸ್ಥೆಯ ವತಿಯಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು. ಸಭೆಯಲ್ಲಿ ಸಂಸ್ಥೆಯ ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಖಜಾಂಚಿ ಟಿ.ಎಂ.ಮುದ್ದಯ್ಯ, ಜಿಲ್ಲಾ ಗೈಡ್ಸ್ ಆಯುಕ್ತೆ ರಾಣಿ ಮಾಚಯ್ಯ, ತರಬೇತಿ ಆಯುಕ್ತ ಕೆ.ಯು.ರಂಜಿತ್, ರೋವರ್ ನಾಯಕ ಜನಾರ್ಧನ್, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ಇದ್ದರು.









