ಮಡಿಕೇರಿ NEWS DESK ಡಿ.3 : ಕೊಡಗಿನ ಪರಿಸರಕ್ಕೆ ಮಾರಕವಾಗಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಡಿ.4 ರಂದು ಕಡಂಗದಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯ ಹುಳುಕುಗಳ ಮೂಲಕ ನೆಲ ಕಬಳಿಸಲು ಹದ್ದಿನ ಕಣ್ಣಿಟ್ಟಿರುವ ಹೊರಗಿನ ಬಂಡವಾಳಶಾಹಿ, ರೆಸಾರ್ಟ್ ಮಾಫಿಯಾ, ಟೌನ್‌ಶಿಪ್ ಧಣಿಗಳು ಹಾಗೂ ಹವಾಲ ದಂಧೆಕೋರರು ತಮ್ಮ ಕರಾಳ ವಿಷ ವರ್ತುಲಗಳ ಮೂಲಕ ಇಡೀ ಪ್ರದೇಶದ ಕೃಷಿ ಭೂಮಿಯನ್ನು ಕಬ್ಜ ಮಾಡಲು ಹೊರಟಿದ್ದಾರೆ. ಆದ್ದರಿಂದ ಬುಧವಾರ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕೊಡವರೆಲ್ಲರು ಪಾಲ್ಗೊಂಡು ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆಯ ದುರುಪಯೋಗದ ವಿರುದ್ಧ ಧ್ವನಿ ಎತ್ತಬೇಕೆಂದು ಮನವಿ ಮಾಡಿದ್ದಾರೆ. ಆದಿಮಸಂಜಾತ ಕೊಡವರ ಹಕ್ಕುಗಳನ್ನು ರಕ್ಷಿಸಲು “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್ ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.









