ಮಡಿಕೇರಿ ಡಿ.6 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನವನ್ನು ನಗರದ ಗಾಂಧಿ ಭವನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಸಿಇಒ ಆನಂದ್ ಪ್ರಕಾಶ್ ಮೀನಾ, ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತ ಸಂವಿಧಾನ ರಚಿಸುವ ಮೂಲಕ ರಾಷ್ಟ್ರಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. ರಾಷ್ಟ್ರದ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸುವ ಮೂಲಕ ಪ್ರತಿಯೊಬ್ಬರೂ ಕರ್ತವ್ಯವನ್ನು ಪಾಲಿಸುವುದು ಅತಿ ಮುಖ್ಯವಾಗಿದೆ ಎಂದರು. ನಾಪೋಕ್ಲು ವಸತಿ ಶಾಲೆಯ ಸಹ ಶಿಕ್ಷಕರಾದ ರೂಪಾ ಮಾತನಾಡಿ ಸಾಮಾಜಿಕ ನ್ಯಾಯ, ಭ್ರಾತೃತ್ವ, ಸಮಾನತೆ ಮತ್ತು ಸಹೋದರತ್ವ ಇದ್ದಲ್ಲಿ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂಬುದನ್ನು ಅಂಬೇಡ್ಕರ್ ಸಾರಿದ್ದಾರೆ ಎಂದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೂಕನಾಯಕ, ಬಹಿಷ್ಕೃತ ಭಾರತ ಪತ್ರಿಕೆಗಳನ್ನು ಹೊರತಂದಿದ್ದರು. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಮೂಲಕ ಪ್ರತಿಯೊಬ್ಬರಲ್ಲಿ ಜಾಗೃತಿ ಮೂಡಿಸಿದರು ಎಂದು ರೂಪ ನುಡಿದರು. ಶೋಷಿತ ಸಮಾಜಗಳು ಇತರರಂತೆ ಬದುಕು ಕಟ್ಟಿಕೊಳ್ಳಲು ಶ್ರಮಿಸಿದ್ದಾರೆ. ವಿಶ್ವದ ಜ್ಞಾನಿಯಾಗಿ ಹಾಗೂ ಭಾರತ ಭಾಗ್ಯವಿಧಾತರಾಗಿ ಸದಾ ಕಣ್ಣುಮುಂದೆ ಇದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಸಮಾನವಾಗಿ ಬದುಕಿ, ಅಭಿವೃದ್ಧಿ ಸಾಧಿಸಬೇಕು ಎಂಬ ಕನಸನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಹೊಂದಿದ್ದರು ಎಂದು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಮಾತನಾಡಿ, ಅಂಬೇಡ್ಕರ್ ಅವರ ಚಿಂತನೆಗಳು, ಬರಹಗಳು, ಭಾಷಣಗಳು ರಾಷ್ಟ್ರದ ಅಭಿವೃದ್ಧಿಗೆ ಸಾರ್ವಕಾಲಿಕ ದಾಖಲೆಗಳಾಗಿವೆ. ಅಂಬೇಡ್ಕರ್ ಅವರ ಸಾರ್ಥಕ ಬದುಕಿನ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು. ಶೋಷಿತ ಸಮುದಾಯಗಳ ಏಳಿಗೆಗೆ ಇಡೀ ಜೀವನವನ್ನೇ ತ್ಯಾಗ ಮಾಡಿದ್ದಾರೆ ಎಂದು ಅವರು ವಿವರಿಸಿದರು. ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ನಗರಸಭೆ ಪೌರಾಯುಕ್ತ ರಮೇಶ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ, ತಾಲ್ಲೂಕು ಸಂಚಾಲಕರಾದ ದೀಪಕ್ ಪೊನ್ನಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಿ.ಪಿ.ಕವಿತಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ, ವ್ಯವಸ್ಥಾಪಕಾರ ಕುಸುಮಾ, ಶಿವಶಂಕರ, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಮಹದೇವಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಗಣ್ಯರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು.