ಮಡಿಕೇರಿ ಡಿ.12 NEWS DESK : ದೇಶ ಕಂಡ ಶ್ರೇಷ್ಠ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಮಾನಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಬಾಳೆಲೆಯ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಬಾಳೆಲೆ ಶ್ರೀ ರಾಮ ವೃತ್ತದಲ್ಲಿ ಜಮಾಯಿಸಿದ್ದ ವಿವಿಧ ಸಂಘಟನೆಗಳ ಪ್ರಮುಖರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಪ್ರಮುಖರಾದ ಅಳಮೆಂಗಡ ಬೋಸ್ ಮಂದಣ್ಣ ಮಾತನಾಡಿ, ವೀರಸೇನಾನಿಗಳು ಸೇರಿದಂತೆ ಯಾರನ್ನೂ ವೈಯಕ್ತಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸುವುದು ಸರಿಯಲ್ಲ ಎಂದರು. ಬಾಳೆಲೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿಮ್ಮಣಮಾಡ ಕೃಷ್ಣ ಗಣಪತಿ ಮಾತನಾಡಿ ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಭಾರತೀಯ ಸೇನೆಗೆ ಮತ್ತು ಭಾರತದ ರಕ್ಷಣಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಇವರುಗಳ ಬಗ್ಗೆ ಅವಹೇಳನ ಮಾಡಿರುವುದನ್ನು ಸಹಿಸಿಕೊಂಡು ಇರಲು ಸಾಧ್ಯವಿಲ್ಲ ಎಂದರು. ಬಾಳೆಲೆ ಗ್ರಾ.ಪಂ ಅಧ್ಯಕ್ಷ ಮುಕ್ಕಾಟಿರ ಜಾನಕಿ, ಸದಸ್ಯರಾದ ಪೊಡಮಾಡ ಸುಕೇಶ್ ಭೀಮಯ್ಯ, ಅಡ್ಡೇಂಗಡ ನವೀನ್, ಕಳ್ಳಿಚಂಡ ಕುಶಾಲಪ್ಪ, ನಿಟ್ಟೂರು ಗ್ರಾ.ಪಂ ಸದಸ್ಯ ಕಾಟಿಮಾಡ ಶರೀನ್ ಮುತ್ತಣ್ಣ, ಪ್ರಮುಖರಾದ ಅಡ್ಡೇಂಗಡ ರಾಖಿ, ಮೇಚಂಡ ಸೋಮಯ್ಯ ಸೇರಿದಂತೆ ವಿವಿಧ ಸಂಘಟನೆಯ ಪ್ರಮುಖರು ಪಾಲ್ಗೊಂಡಿದ್ದರು.