




ಮಡಿಕೇರಿ ಡಿ.20 NEWS DESK : ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿಯ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಬಂಧನವನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಸರಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಕಾಂಗ್ರೆಸ್ ಸರಕಾರ ಆಡಳಿತವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಸಂವಿಧಾನದ ದೇಗುಲ ವಿಧಾನಸೌಧದಲ್ಲಿ ಅಧಿವೇಶನ ನಡೆಯುವ ಸಂದರ್ಭ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ಮಾತಿನ ಚಕಮಕಿ ನಡೆದಿದೆ. ಇದನ್ನು ನೆಪ ಮಾಡಿಕೊಂಡು ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರಿ ಸಿ.ಟಿ.ರವಿ ಅವರನ್ನು ಬಂಧಿಸಿರುವುದು ಒಬ್ಬ ಜನಪ್ರತಿನಿಧಿಗೆ ಹಾಗೂ ಸಂವಿಧಾನಕ್ಕೆ ಮಾಡಿರುವ ಅಪಮಾನವಾಗಿದೆ ಎಂದು ಆರೋಪಿಸಿದರು. ಸುವರ್ಣ ಸೌಧದೊಳಗೆ ಗೂಂಡಾಗಳ ಪ್ರವೇಶಕ್ಕೆ ಪ್ರಚೋದನೆ ನೀಡಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು, ಸರ್ಕಾರದ ದ್ವಿಮುಖ ಧೋರಣೆ ಹಾಗೂ ಗೂಂಡಾಗಿರಿಯನ್ನು ತಕ್ಷಣವೇ ನಿಲ್ಲಿಸಬೇಕು, ರಾಜ್ಯದಲ್ಲಿ ಜನಪ್ರತಿನಿಧಿಗಳಿಗೆ ಹಾಗೂ ಸಾಮಾನ್ಯ ಜನರಿಗೆ ರಕ್ಷಣೆ ನೀಡಲು ವಿಫಲವಾಗಿರುವ ಸರಕಾರವನ್ನು ತಕ್ಷಣ ವಜಾಗೊಳಿಸಲು ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಬೇಕು, ಸಿ.ಟಿ.ರವಿ ಅವರನ್ನು ಬಂಧಮುಕ್ತಗೊಳಿಸಿ ರಾಜ್ಯ ಸರ್ಕಾರ ತನ್ನ ತಪ್ಪಿಗೆ ಬೇಷರತ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್, ಕಾಂಗೀರ ಸತೀಶ್, ಮಡಿಕೇರಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಮಹಿಳಾ ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅನಿತಾ ಪೂವಯ್ಯ, ಮಾಜಿ ಅಧ್ಯಕ್ಷರಾದ ರಾಬಿನ್ ದೇವಯ್ಯ, ಬಿ.ಬಿ.ಭಾರತೀಶ್, ಪ್ರಮುಖರಾದ ಎಂ.ಬಿ.ದೇವಯ್ಯ, ಬಿ.ಕೆ.ಜಗದೀಶ್, ಮನು ಮಂಜುನಾಥ್, ಶ್ವೇತ, ಸಬಿತಾ, ಮತ್ತಿತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಮೂಲಕ ಸರಕಾರದ ವಿರುದ್ಧ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.