ಮಡಿಕೇರಿ ಡಿ.21 NEWS DESK : ಇತ್ತೀಚೆಗೆ ಸಂಸತ್ ಅಧಿವೇಶನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅಗೌರವ ತೋರುವ ರೀತಿಯಲ್ಲಿ ಹೇಳಿಕೆ ನೀಡಿ ದೇಶದ ಜನರ ಭಾವನೆಗೆ ದಕ್ಕೆ ತಂದಿದ್ದಾರೆ ಎನ್ನುವ ಆರೋಪ ಎದುರಿಸುತ್ತಿರುವ ಗೃಹಸಚಿವ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಭಾರತ ದೇಶದಲ್ಲಿ ಸಾವಿರಾರು ಜಾತಿ, ಮತಗಳಿವೆ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿ ಸರ್ವರಿಗೂ ಸಮಾನ ಹಕ್ಕನ್ನು ನೀಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಿದ್ದಾರೆ. ಇದೇ ಕಾರಣಕ್ಕೆ ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಿಕೊಳ್ಳುವುದು ಭಾರತೀಯರ ಅಭಿಮಾನಕ್ಕೆ ಸಾಕ್ಷಿಯಾಗಿದೆ. ಆದರೆ ಇದನ್ನೇ ಕೇವಲವಾಗಿ ಕಂಡಿರುವ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅವರನ್ನು ಸ್ಮರಿಸುವುದು ಫ್ಯಾಷನ್ ಎಂದು ಹೇಳುವ ಮೂಲಕ ಅಗೌರವ ತೋರಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
::: ರವಿ ವಿರುದ್ಧ ಕ್ರಮಕ್ಕೆ ಒತ್ತಾಯ ::: ಬೆಳಗಾವಿ ಅಧಿವೇಶನ ನಡೆಯುತ್ತಿದ್ದ ಸುವರ್ಣ ಸೌಧದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿದ್ದಾರೆ ಎನ್ನುವ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಇದೇ ಸಂದರ್ಭ ಪಕ್ಷದ ಪ್ರಮುಖರು ರಾಜ್ಯಪಾಲರಿಗೆ ದೂರು ಸಲ್ಲಿಸಿದರು. ಮಾಜಿ ಮಂತ್ರಿಯಾಗಿದ್ದು, ಹೆಣ್ಣು ಮಕ್ಕಳ ಬಗ್ಗೆ ಅಪಾರ ಕಾಳಜಿ, ಗೌರವ ಹೊಂದಿರಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೇ ಘನತೆವೆತ್ತ ಸದನದಲ್ಲಿ ಮಹಿಳಾ ಮಂತ್ರಿಯೊಬ್ಬರ ವಿರುದ್ಧ ಆಕ್ಷೇಪಾರ್ಹ ಪದ ಪ್ರಯೋಗ ಮಾಡಿದ್ದಾರೆ. ಇದು ನಾಡಿನ ಎಲ್ಲಾ ಮಹಿಳೆಯರ ಭಾವನೆಗಳಿಗೆ, ಅವರ ಘನತೆಗೆ ಉಂಟು ಮಾಡಿರುವ ಅಪಮಾನವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮನವಿ ನೀಡಿ ಮಾತನಾಡಿದ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಸಂಸತ್ ನಲ್ಲಿ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತಾ ಶಾ ಅವರು ದೇಶದ ಜನರ ಕ್ಷಮೆಯಾಚಿಸಬೇಕು. ಇವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಲೋಕಸಭಾ ಸದಸ್ಯ ಸ್ಥಾನವನ್ನು ರದ್ದುಗೊಳಿಸಿ ತನಿಖೆಗೆ ಒಳಪಡಿಸಬೇಕು. ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಇಮ್ರಾನ್, ಪ್ರಧಾನ ಕಾರ್ಯದರ್ಶಿ ಎಂ.ಎನ್.ರೌವುಫ್, ನಗರಾಧ್ಯಕ್ಷ ಎಂ.ಬಿ.ಕೌಸರ್, ಕಾರ್ಯದರ್ಶಿ ನಿರಂಜನ್ ಜೆವಿಯರ್, ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯ ಇಬ್ರಾಹಿಂ, ಡಿಸಿಸಿ ಸದಸ್ಯ ಖಲೀಲ್ ಬಾಷಾ, ಬೂತ್ ಅಧ್ಯಕ್ಷ ಅಫೀಜ್, ಪ್ರಮುಖರಾದ ಅಬೀಬ್, ರಿಯಾಜ್, ಸೌಖತ್ ಆಲಿ, ರೆಹಮಾನ್, ಹಯತ್, ನಸೀರ್, ಹುಸೇನ್, ಅಬು ಮತ್ತಿತರರು ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.