


ಮಡಿಕೇರಿ ಡಿ.24 NEWS DESK : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಸಂಸತ್‍ನಲ್ಲಿ ಪ್ರಸ್ತಾಪಿಸಿ ಅಪಹಾಸ್ಯ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ನಿಲುವನ್ನು ಖಂಡಿಸಿ ಕೊಡಗು ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಒಕ್ಕೂಟದ ಪ್ರಮುಖರು ಹಾಗೂ ಪದಾಧಿಕಾರಿಗಳು, ಮಾನವ ಸರಪಳಿ ರಚಿಸಿ, ಕೇಂದ್ರ ಗೃಹ ಸಚಿವ ಅಮಿತಾ ಶಾ ವಿರದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಪಮಾನಿಸುವ ಮೂಲಕ ಅಮಿತ್ ಷಾ ಅವರು ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ. ತಕ್ಷಣವೆ ಗೃಹ ಸಚಿವರು ರಾಷ್ಟ್ರದ ಜನತೆಯ ಮುಂದೆ ಕ್ಷಮೆ ಯಾಚನೆ ಮಾಡಬೇಕು ಮತ್ತು ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದರು. ಜಿಲ್ಲಾ ದಸಂಸ ಸಂಚಾಲಕರಾದ ದಿವಾಕರ್, ಒಕ್ಕೂಟದ ಸಂಚಾಲಕ ಮೋಹನ್ ಮೌರ್ಯ, ಕಾರ್ಯದರ್ಶಿ ಗಣೇಶ್, ಪ್ರಮುಖರಾದ ಟಿ.ಪಿ.ರಮೇಶ್, ಚಂದ್ರಶೇಖರ್, ಇಸಾಖಾನ್, ಕೆ.ಜಿ.ಪೀಟರ್, ಮುಸ್ತಪಾ ಸೇರಿದಂತೆ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.











