ಮಡಿಕೇರಿ NEWS DESK ಡಿ.24 : ಕೊಡಗು ಜಿಲ್ಲಾ ಪೊಲೀಸ್ ನ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪ್ರಬಾರ ಜಿಲ್ಲಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು ಕ್ರೀಡಾ ಚಟುವಟಿಕೆಗಳ ಮೂಲಕ ಮಾನಸಿಕ ದೃಢತೆ, ದೈಹಿಕ ಸಾಮರ್ಥ್ಯ, ಮಾನಸಿಕ ಸಮತೋಲನ ಮತ್ತು ನಾಯಕತ್ವದ ಗುಣ ಬೆಳೆೆಸಿಕೊಳ್ಳಲು ಸಾಧ್ಯವಿದೆ. ಪೊಲೀಸ್ ಇಲಾಖೆಗೆ ಸೇರ್ಪಡೆಯಾಗುವವರಿಗೆ ಅಗತ್ಯವಾಗಿ ಇರಬೇಕಾದ ಈ ಎಲ್ಲಾ ಅಂಶಗಳನ್ನು ಕ್ರೀಡಾಚಟುವಟಿಕೆಗಳ ಮೂಲಕ ಪಡೆಯಬಹುದಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪ್ರಾಸ್ತಾವಿಕವಾಗಿ ಮಾತನಾಡಿ, ವಾರ್ಷಿಕ ಕ್ರೀಡಾಕೂಟಕ್ಕಾಗಿ ಶ್ರಮಿಸಿದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಕೃತಜ್ಞತೆ ಮತ್ತು ಕೇವಲ ಆರು ಗಂಟೆಗಳ ಅವಧಿಯಲ್ಲಿ ಡಿಎಆರ್ ಮೈದಾನವನ್ನು ಸಜ್ಜುಗೊಳಿಸಿದವರಿಗೆ ಅಭಿನಂದನೆಯನ್ನು ಸಲ್ಲಿಸಿದರು. ಮೂರು ದಿನಗಳ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ಎಲ್ಲಾ ಠಾಣೆಯ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಪ್ರತಿದಿನ ಕರ್ತವ್ಯದ ಜಂಜಾಟದಲ್ಲಿ ಇರುವವರು ಒಂದಷ್ಟು ಸಮಯ ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಕ್ರೀಡಾಕೂಟ ಸಹಕಾರಿಯಾಗಿದೆ ಎಂದರು. ಉದ್ಘಾಟನಾ ಕಾರ್ಯಕ್ರಮದ ನಂತರ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಆಸಕ್ತಿಯಿಂದ ಪಾಲ್ಗೊಂಡರು.
ಇದೇ ಡಿ.26ರಂದು ಸಂಜೆ 4 ಗಂಟೆಗೆ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಎಂ.ಬಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಂದರ್ ರಾಜ್ ಮತ್ತಿತರ ಪೊಲೀಸ್ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.











