ನವದೆಹಲಿ NEWS DESK ಡಿ.26 : ಆರ್ಥಿಕ ಸುಧಾರಣೆ, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಹೊಸ ದಿಕ್ಕು ತೋರಿಸಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ (92) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. 2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. ಸಿಂಗ್ ಅವರು ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. 2009ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಧಾನಿಯಾಗಿ 2 ನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ್ದರು. ಸಿಂಗ್ ಅವರ ರಾಜಕೀಯ ಜೀವನ 1991ರಲ್ಲಿ ಅವರು ರಾಜ್ಯಸಭೆಗೆ ಪ್ರವೇಶಿಸಿದಾಗ ಪ್ರಾರಂಭವಾಯಿತು. ಕೇವಲ ನಾಲ್ಕು ತಿಂಗಳ ನಂತರ, ಅಂದಿನ ಪ್ರಧಾನಿ ಪಿ.ವಿ.ನರಸಿಂಹ ರಾವ್ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ನೇಮಕಗೊಂಡು ಭಾರತದ ಆರ್ಥಿಕತೆಯಲ್ಲಿ ಪರಿವರ್ತನೆಗೆ ಕಾರಣರಾಗಿದ್ದರು. 1990 ರಲ್ಲಿ ಆರ್ಥಿಕ ಸುಧಾರಣೆಗಳು, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಹೊಸ ದಿಕ್ಕು ತೋರಿಸಿದ ಕೀರ್ತಿ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ. 6 ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಸಿಂಗ್, ಒಮ್ಮೆಯೂ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಲಿಲ್ಲ.