ಮಡಿಕೇರಿ NEWS DESK ಡಿ.30 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಐದು ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಜಾಥಾ ನಡೆಸುವ ಸಾಧ್ಯತೆಗಳಿರುವುದರಿಂದ ಮುಂಜಾಗೃತಾ ಕ್ರಮವಾಗಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಎರಡು ಜನಾಂಗಗಳ ನಡುವಿನ ಭಿನ್ನಾಭಿಪ್ರಾಯದಿಂದ ಗೊಂದಲ ಸೃಷ್ಟಿಯಾಗಿದ್ದು, ಉಭಯ ಗುಂಪು ಸೋಮವಾರ ಕಟ್ಟೆಮಾಡಿಗೆ ಜಾಥಾ ನಡೆಸುವ ಕುರಿತು ಹೇಳಿಕೆ ನೀಡಿರುವ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡಲು ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಶಾಂತಿಯನ್ನು ಕಾಪಾಡಲು ಜಿಲ್ಲಾಡಳಿತ ಮನವಿ ಮಾಡಿದೆ.