ಮಡಿಕೇರಿ NEWS DESK ಡಿ.30 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಐದು ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಜಾಥಾ ನಡೆಸುವ ಸಾಧ್ಯತೆಗಳಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು. ಕೊಡವ ಮತ್ತು ಗೌಡ ಎರಡು ಜನಾಂಗಗಳ ನಡುವಿನ ಭಿನ್ನಾಭಿಪ್ರಾಯದಿಂದ ಗೊಂದಲ ಸೃಷ್ಟಿಯಾಗಿದ್ದು, ಉಭಯ ಗುಂಪು ಸೋಮವಾರ ಕಟ್ಟೆಮಾಡಿಗೆ ಜಾಥಾ ನಡೆಸುವ ಕುರಿತು ಹೇಳಿಕೆ ನೀಡಿದ್ದ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡಲು ನೂರಾರು ಪೊಲೀಸರನ್ನು ನಿಯೋಜಿಸಲಾಗಿತ್ತು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ::: ಎಸ್‌ಪಿ ಎಚ್ಚರಿಕೆ ::: ಈಗಾಗಲೇ ದೇವಾಲಯದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಯಾರಾದರು ಶಾಂತಿಭಂಗ ಮಾಡಲು ಯತ್ನಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ. ಪರಿಸ್ಥಿತಿಯನ್ನು ಶಾಂತಿಯುತವಾಗಿ ನಿಭಾಯಿಸಲು ಅವಕಾಶವಿದ್ದರೂ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಜನಾಂಗಗಳ ವಿರುದ್ಧ ಅವಹೇಳನ ಮಾಡುತ್ತಿರುವುದು ಕಂಡು ಬಂದಿದೆ. ಸಮಾಜದಲ್ಲಿ ಅಶಾಂತಿ ಮೂಡಿಸುವವರ ಪರ ಯಾರೂ ನಿಲ್ಲಬಾರದು. ಸಮಸ್ಯೆಯನ್ನು ಬಗೆಹರಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇದೆ. ಯಾರ ಮೇಲೂ ನಂಬಿಕೆ ಇಲ್ಲದಿದ್ದರೆ ಕಾನೂನಿನ ಮೊರೆ ಹೋಗಬಹುದು. ಪ್ರಕರಣದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅನವಶ್ಯಕ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಎಲ್ಲರೂ ಶಾಂತಿಯನ್ನು ಕಾಪಾಡಬೇಕು, ಶಾಂತಿಭಂಗ ಮಾಡಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ತಿಳಿಸಿದರು.









