ನಾಪೋಕ್ಲು ಜ.2 NEWS DESK : ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಹತೋಟಿಗೆ ತಂದುಕೊಳ್ಳುವ ಅನಿವಾರ್ಯತೆ ಇದೆ ಎಂದು ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಟಿ.ಎಸ್.ಸುಬ್ಬಯ್ಯ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಡಿಕೇರಿ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ನಾಪೋಕ್ಲು ವಲಯ ಮತ್ತು ಅರುಣ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲಾ ವಿಭಾಗ ಚೇರಂಬಾಣೆ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳೇ ಉತ್ತಮ ಸಮಾಜದ ಆಸ್ತಿ. ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾದದ್ದು ಎಂದರು. ಸಂಪನ್ಮೂಲ ವ್ಯಕ್ತಿ ಶಿಬಿರಾಧಿಕಾರಿ ನಂದಕುಮಾರ್ ಮಾತನಾಡಿ ಇದುವರೆಗೆ ಕರ್ನಾಟಕ ರಾಜ್ಯದ 17,848 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ನಡೆಸಿ 21 ಲಕ್ಷಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿದ್ದಾರೆ. ಜನಜಾಗೃತಿ ವೇದಿಕೆಯ ಮುಖೇನ ಸಮುದಾಯದ ಸಹಭಾಗಿತ್ವದೊಂದಿಗೆ ಇದುವರೆಗೆ 1903 ಮದ್ಯವರ್ಜನ ಶಿಬಿರಗಳನ್ನು ನಡೆಸಿ 1 ಲಕ್ಷದ 50 ಸಾವಿರ ಮದ್ಯವ್ಯಸನಿಗಳನ್ನು ವ್ಯಸನಮುಕ್ತಗೊಳಿಸಲಾಗಿದೆ ಎಂದರು. ಮಾದಕ ವ್ಯಸನವೆಂಬುದೊಂದು ರೋಗ. ವಿಶ್ವ ಆರೋಗ್ಯ ಸಂಸ್ಥೆಯ ಕಳೆದ ಸಂಶೋಧನೆಯ ಪ್ರಕಾರ ನಮ್ಮ ಭಾರತ ದೇಶದಲ್ಲಿ ಒಂದು ವರ್ಷಕ್ಕೆ 5 ಲಕ್ಷ ಜನರು ಮದ್ಯಪಾನದಿಂದ ಮರಣ ಹೊಂದಿದರೆ 14.5 ಲಕ್ಷ ಜನರು ಮಾದಕ ದ್ರವ್ಯ, ಮಾದಕ ವ್ಯಸನ ಅಥವಾ ಇನ್ನಿತರ ಚಟಗಳಿಂದ ಬಲಿಯಾಗುತ್ತಿರುವುದು ಶೋಚನೀಯವಾಗಿದೆ. ಪ್ರಪಂಚದ ಐದು ಭೀಕರವಾದ ಖಾಯಿಲೆಗಳಲ್ಲಿ ಮಾದಕ ವ್ಯಸನವೂ ಒಂದು. ವಿದ್ಯಾರ್ಥಿಗಳ ವಯಸ್ಸು ಹದಿಹರೆಯದ ವಯಸ್ಸು. ಹದಿಹರೆಯದಲ್ಲಿನ ಒತ್ತಡಗಳು, ತಂದೆ – ತಾಯಂದಿರ ಒತ್ತಡ, ಸ್ನೇಹಿತರ ಒತ್ತಡ, ಜೀವನ ಶೈಲಿ, ಮಾಧ್ಯಮ, ಆರ್ಥಿಕ ಸ್ವಾತಂತ್ರ್ಯ, ಪ್ರೀತಿಯ ಕೊರತೆ, ಅನಾರೋಗ್ಯ, ಪಾಶ್ಚಾತ್ಯ ಸಂಸ್ಕೃತಿ, ಸಾಹಸ ಪ್ರವೃತ್ತಿ, ನಕಾರಾತ್ಮಕ ಚಿಂತನೆಗಳು, ಈ ಎಲ್ಲಾ ಕಾರಣಗಳಿಂದಾಗಿ ಅಮಲು ಪದಾರ್ಥ ಹಾಗೂ ಇನ್ನಿತರ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ. ಇದಕ್ಕೆ ಬಲಿಯಾಗದಂತೆ ನೋಡಿಕೊಳ್ಳಬೇಕಾಗಿದೆ ಎಂದರು. ವೇದಿಕೆಯಲ್ಲಿ ಅರುಣ ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕ ಲೋಕೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಾಪೋಕ್ಲು ವಲಯದ ಮೇಲ್ವಿಚಾರಕ ಸುನಿಲ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿ.ಯು ವಿಭಾಗದ 65 ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಪ್ರೌಢ ಶಾಲಾ ವಿಭಾಗದ ಶಿಕ್ಷಕ ರಮೇಶ್ ಸ್ವಾಗತಿಸಿ, ನಿರೂಪಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನಾಪೋಕ್ಲು ವಲಯದ ಮೇಲ್ವಿಚಾರಕ ಸುನಿಲ್ ವಂದಿಸಿದರು.
ವರದಿ : ದುಗ್ಗಳ ಸದಾನಂದ.