ಮಡಿಕೇರಿ ಜ.6 NEWS DESK : ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಗ್ರಾಮದಲ್ಲಿ ಗುಂಡೇಟಿಗೆ ಬಲಿಯಾದ ಕಾರ್ಮಿಕ ಪಣಿಎರವರ ಪೊನ್ನು ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ ಮಾಕ್ರ್ಸ್‍ವಾದಿಯ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪಕ್ಷದ ಪ್ರಮುಖರು ಘಟನೆಯನ್ನು ತೀವ್ರವಾಗಿ ಖಂಡಿಸಿದರು.
ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ರಮೇಶ್ ಮಾತನಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದೆ. ಆದರೆ ಪ್ರಭಾವಕ್ಕೆ ಮಣಿದು ಪ್ರಕರಣವನ್ನು ಸಡಿಲಗೊಳಿಸಬಾರದು, ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಾವಿಗೀಡಾದ ಪೊನ್ನುವಿನ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು, ನಿವೇಶನ ಮಂಜೂರು ಮಾಡಿ ಸರಕಾರವೇ ಮನೆ ನಿರ್ಮಿಸಿಕೊಡಬೇಕು. ಕುಟುಂಬದ ಸದಸ್ಯರೊಬ್ಬರಿಗೆ ಸರಕಾರಿ ನೌಕರಿ ನೀಡಬೇಕು ಮತ್ತು ನಿರಂತರವಾಗಿ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಬುಡಕಟ್ಟು ಜನಾಂಗದ ರಕ್ಷಣೆಗಾಗಿ ಕಠಿಣ ಕಾನೂನು ಕ್ರಮ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಪಕ್ಷದ ಮುಖಂಡ ಪಿ.ಆರ್.ಭರತ್ ಮಾತನಾಡಿ ಕೊಡಗಿನ ನಿವಾಸಿಗಳಾದ ಎರವರು, ಕುರುಬರು ಮೊದಲಾದ ಬುಡಕಟ್ಟು ಜನಾಂಗದವರ ಮೇಲೆ ಶೋಷಣೆ ನಡೆಯುತ್ತಿದೆ, ಆದಿವಾಸಿಗಳ ಭೂಮಿಯನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಪಣಿಎರವರ ಪೊನ್ನು ಅವರ ಸಾವಿನ ಪ್ರಕರಣ ಅತ್ಯಂತ ಖಂಡನೀಯವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.