ಮಡಿಕೇರಿ,ಜ.9 NEWS DESK : ನಾಪೋಕ್ಲುವಿನಲ್ಲಿ 2024ರಲ್ಲಿ ನಡೆದ ಕುಂಡ್ಯೋಳಂಡ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಆಯೋಜಕರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ.ಗಳ ಚೆಕ್ ಅನ್ನು ಯುವ ಸಬಲೀಕರಣ ಇಲಾಖೆ ವತಿಯಿಂದ ವಿತರಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರೊಂದಿಗೆ ಕುಂಡ್ಯೋಳಂಡ ಕುಟುಂಬಸ್ಥರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಾಕಿ ಪಂದ್ಯಾಟಕ್ಕೆ ಸಹಕಾರ ನೀಡಿದ್ದಕ್ಕೆ ಧನ್ಯವಾದ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಂಡ್ಯೋಳಂಡ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯು ಗಿನ್ನಿಸ್ ಬುಕ್ ಆಫ್ ರೆಕಾಡ್ರ್ಸ್‍ನಲ್ಲಿ ದಾಖಲಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಹಾಕಿ ಕೊಡವರ ಜನಪ್ರಿಯ ಕ್ರೀಡೆಯಾಗಿದ್ದು, ಕೊಡಗಿನಲ್ಲಿ ಪ್ರತಿ ವರ್ಷ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಆಯೋಜಿಸುತ್ತಿರುವುದು ಶ್ಲಾಘನೀಯ. ಹಾಕಿ ಹುಟ್ಟಿದ್ದು ಭಾರತ ದೇಶದಲ್ಲಿ. ಧ್ಯಾನಚಂದ್ ಅವರಂತಹ ಹಾಕಿ ಮಾಂತ್ರಿಕ ಹುಟ್ಟಿದ ದೇಶ ನಮ್ಮದು. ಕ್ರಿಕೆಟ್ ಅಷ್ಟೇ ಅಲ್ಲ, ಹಾಕಿ ಕೂಡ ಅತ್ಯಂತ ಜನಪ್ರಿಯ ಕ್ರೀಡೆಯಾಗಿದ್ದು ಮುಂದಿನ ದಿನಗಳಲ್ಲಿಯೂ ಈ ಪರಂಪರೆ ಮುಂದುವರೆಸಿಕೊಂಡು ಹೋಗಬೇಕೆಂದು ಹೇಳಿ ಶುಭ ಹಾರೈಸಿದರು.
ಕೊಡಗು ಜಿಲ್ಲೆಯಲ್ಲಿ ಕೊಡವ ಕುಟುಂಬಗಳು ಪ್ರತಿ ವರ್ಷ ಸಾಂಪ್ರದಾಯಿಕ ಕೌಟುಂಬಿಕ ಹಾಕಿ ಪಂದ್ಯಾವಳಿಯನ್ನು ಕಳೆದ 23 ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದು, ಬಹಳಷ್ಟು ಕೊಡವರು ರಾಷ್ಟ್ರೀಯ ಹಾಕಿ ತಂಡದಲ್ಲಿ ಆಟವಾಡಿದ್ದಾರೆ. ರಾಜ್ಯ ಸರ್ಕಾರ ಹಾಕಿ ಪಂದ್ಯಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡುತ್ತಾ ಬಂದಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕಳೆದ ವರ್ಷ ಕೊಡವ ಹಾಕಿ ಕ್ರೀಡಾಕೂಟದಲ್ಲಿ 360 ತಂಡಗಳು, 4800 ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಇದು ಗಿನ್ನೆಸ್ ಬುಕ್‍ನಲ್ಲಿ ದಾಖಲಾಗಿದೆ. ಹಾಕಿ ಪಂದ್ಯಾವಳಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಎಲ್ಲಾ ನೆರವು ನೀಡಲಾಗುವುದು ಎಂದು ಇದೇ ಸಂದರ್ಭ ಮುಖ್ಯಮಂತ್ರಿಗಳು ಭರವಸೆ ನೀಡಿದರು. ಸಂಸದ ಅಜಯ್ ಮಾಕನ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣು ಪ್ರಕಾಶ್ ಪಾಟೀಲ್, ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಈ ಸಂದರ್ಭ ಉಪಸ್ಥಿತರಿದ್ದರು.