ಮಡಿಕೇರಿ ಜ.10 NEWS DESK : ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಜ.12 ರಿಂದ 18ರ ವರೆಗೆ ಜಿಲ್ಲೆಯ ಯುವಕ ಸಂಘ, ಯುವತಿ ಮಂಡಳಿ, ಮಹಿಳಾ ಸಮಾಜ ಹಾಗೂ ಶಾಲಾ ಕಾಲೇಜುಗಳ ಆಶ್ರಯದಲ್ಲಿ ಮಡಿಕೇರಿಯಲ್ಲಿ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ನಡೆಯಲಿದ್ದು, ಜ.13 ರಂದು ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾಡಳಿತ, ಜಿ.ಪಂ ಕೊಡಗು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮಡಿಕೇರಿ, ಜಿಲ್ಲಾ ಯುವ ಒಕ್ಕೂಟ ಕೊಡಗು, ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಜಿಲ್ಲೆಯ ಯುವಕ ಸಂಘ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ಜ.13 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮವನ್ನು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಡಾ.ಧನಂಜಯ ಸರ್ಜಿ, ಎಸ್.ಎಲ್.ಭೋಜೇಗೌಡ, ಕೊಡಗು ಜಿ.ಪಂ ಆಡಳಿತಾಧಿಕಾರಿ ಹಾಗೂ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಸರಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಆರ್.ಪಿ.ಚಂದ್ರಶೇಖರ್, ಪ್ರಾಂಶುಪಾಲ ಪಿ.ಆರ್.ವಿಜಯ ಪಾಲ್ಗೊಳ್ಳಲಿದ್ದಾರೆ. ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಉಪನ್ಯಾಸ ನೀಡಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ವಿರಾಜಪೇಟೆಯ ನಟ್ಯಾಂಜಲಿ ನೃತ್ಯ ಸಂಸ್ಥೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸುಕುಮಾರ್ ತಿಳಿಸಿದರು.