ಮಡಿಕೇರಿ ಜ.11 NEWS DESK : ಕೊಡಗು ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ ಹಾಗೂ ಕಟ್ಟಡ ಕಾಮಗಾರಿ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ವಿರಾಜಪೇಟೆ ತಾಲ್ಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿವಿಧ ಕಾಮಗಾರಿ ಬಗ್ಗೆ ಮಾಹಿತಿ ಪಡೆದರು. ಸಭೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ ರಸ್ತೆ ಸೇರಿದಂತೆ ನಗರದಲ್ಲಿ ಇನ್ನೂ ಪೂರ್ಣಗೊಳ್ಳಬೇಕಿರುವ ಕೊಡವ ಹೆರಿಟೇಜ್ ಸೆಂಟರ್, ಕನ್ನಡ ಸುವರ್ಣ ಸಮುಚ್ಚಯ ಭವನ ನಿರ್ಮಾಣ ಕಾಮಗಾರಿ ಹಾಗೂ ಮಂಗಳೂರು ರಸ್ತೆಯ ತಡೆಗೋಡೆ ಬಗ್ಗೆ ಬೆಳಕು ಚೆಲ್ಲಿದರು. ಮಡಿಕೇರಿ ನಗರದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಪಾಸ್ ನಿರ್ಮಾಣ ಮಾಡಬೇಕಿತ್ತು ಆದರೆ ಇದನ್ನು ಕೈಗೊಳ್ಳಲಿಲ್ಲ, ಜೊತೆಗೆ ತಡೆಗೋಡೆ ಕಾಮಗಾರಿಯನ್ನು ಡಿಸೆಂಬರ್ 31ರೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಅವರು ನಿರ್ದೇಶನ ನೀಡಿದ್ದರೂ ಕೆಲಸ ಆಗಿಲ್ಲ ಎಂದು ಶಾಸಕರು ಸಚಿವರ ಗಮನಕ್ಕೆ ತಂದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ರಸ್ತೆ ಹಾಗೂ ವಿವಿಧ ಕಟ್ಟಡ ಕಾಮಗಾರಿಗಳ ಬಗ್ಗೆ ವಿವರಿಸಿದರು. ಶಾಸಕದ್ವಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಡೆಗೋಡೆ ವೀಕ್ಷಿಸಲಾಗುವುದು ಎಂದು ತಿಳಿಸಿದರು. ಇದೇ ಸಂದರ್ಭ ಶಾಸಕ ಡಾ.ಮಂತರ್ ಗೌಡ ಅವರು ಕೊಡಗು ಜಿಲ್ಲೆಯ ರಸ್ತೆ ಹಾಗೂ ಕಟ್ಟಡಗಳ ಅಭಿವೃದ್ಧಿಗೆ 250 ಕೋಟಿ ರೂ.ಬಿಡುಗಡೆ ಮಾಡುವಂತೆ ಸಚಿವರಲ್ಲಿ ಕೋರಿದರು. ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಅಧಿಕಾರಿಗಳು, ಎಂಜಿನಿಯರ್‌ಗಳು ಇದ್ದರು.