ಮಡಿಕೇರಿ ಜ.13 NEWS DESK : ಹೊದ್ದೂರು ಗ್ರಾಮ ಪಂಚಾಯಿತಿಯು ಇದೀಗ ಇಡೀ ದೇಶಕ್ಕೆ ಮಾದರಿ ಪಂಚಾಯಿತಿಯಾಗಿ ಕಾರ್ಯನಿರ್ವಹಿಸುತ್ತಿದೆ. ಸದಸ್ಯರು, ಸಿಬ್ಬಂದಿ ವರ್ಗದವರ ಸಹಕಾರ ಮತ್ತು ಒಗ್ಗಟ್ಟಿನಿಂದ ಮಾತ್ರ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್.ಎ.ಹಂಸ ಕೊಟ್ಟಮುಡಿ ಅಭಿಪ್ರಾಯಪಟ್ಟರು. ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯು ಹೊದ್ದೂರು ಗ್ರಾಮ ಪಂಚಾಯಿತಿಗೆ ಇತ್ತೀಚಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಆಡಳಿತ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಸಂದರ್ಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಹೆಚ್.ಎ.ಹಂಸ ಹೊದ್ದೂರು ಗ್ರಾಮ ಪಂಚಾಯಿತಿಯು ಬಡವರ ಪರವಾಗಿ ವಿಶೇಷ ಕಾಳಜಿಯನ್ನು ವಹಿಸಿ ಕಾರ್ಯನಿರ್ವಹಿಸುತ್ತಿದೆ.ವಸತಿ ರಹಿತರಿಗೆ ನಿವೇಶನ ನೀಡುವಲ್ಲಿ ಗ್ರಾಮ ಪಂಚಾಯಿತಿ ಇಡೀ ಕೊಡಗು ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದ್ದು,ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿಯ ಸದಸ್ಯರು ಭೇಟಿ ನೀಡಿ ಹೊದ್ದೂರು ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳು ಇನ್ನಷ್ಟು ವಿಶೇಷವಾಗಿ ಗ್ರಾಮ ಪಂಚಾಯಿತಿ ಕಾರ್ಯನಿರ್ವಹಿಸಲಿದೆ ಎಂದು ಹಂಸ ಹೇಳಿದರು. ತುರುವನೂರು ಗ್ರಾ.ಪಂ ಅಧ್ಯಕ್ಷರಾದ ನಾಗರತ್ನ ಮಾತನಾಡಿ, ಹೊದ್ದೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದಾಗ ಗ್ರಾಮ ಆಡಳಿತದ ಬಗ್ಗೆ ಹೆಮ್ಮೆ ಅನಿಸಿದೆ. ಸುಸಜ್ಜಿತವಾದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಕಾರ್ಯನಿರ್ವಹಿಸುತ್ತಿದೆ. ಜನಸ್ನೇಹಿ ಕಾರ್ಯಕ್ರಮದ ಮೂಲಕ ಹೊದ್ದೂರು ಗ್ರಾಮ ಪಂಚಾಯಿತಿಯು ಎಲ್ಲರಿಗೂ ಮಾದರಿಯಾಗಿದೆ. ನಮ್ಮ ಗ್ರಾಮ ಪಂಚಾಯಿತಿಯಲ್ಲಿ ಕೂಡ ಹೊದ್ದೂರು ಗ್ರಾಮ ಪಂಚಾಯಿತಿ ಮಾದರಿಯಲ್ಲಿಯೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತೇವೆ. ಹೊದ್ದೂರು ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ನಮಗೆಲ್ಲರಿಗೂ ಮಾದರಿಯಾಗಿದೆ ಎಂದು ತುರುವನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನ ಅಭಿಪ್ರಾಯಪಟ್ಟರು.