ಮಡಿಕೇರಿ ಜ.15 NEWS DESK : ಬೇಟೋಳಿ ರಾಮನಗರದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಶ್ರೀ ಅಯ್ಯಪ್ಪ ಮಹೋತ್ಸವ ಹಾಗೂ ಮಕರ ಜ್ಯೋತಿ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ನೇತೃತ್ವದಲ್ಲಿ ಮುಂಜಾನೆಯಿಂದಲೇ ದೇವತಾ ಪ್ರಾರ್ಥನೆ, ಶ್ರೀ ಗಣಪತಿ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ನೆರವೇರಿತು. ನಂತರ ಶ್ರೀ ಅಯ್ಯಪ್ಪ ಸ್ವಾಮಿಗೆ ಅಲಂಕಾರ ಪೂಜೆ, ಕ್ಷೀರಾಭಿಷೇಕ, ಸೀಯಾಳ ಅಭಿಷೇಕ, ತುಪ್ಪದ ಅಭಿಷೇಕ ಹಾಗೂ ಕುಂಕುಮಾರ್ಚನೆ, ಭಸ್ಮಾರ್ಚನೆ ಸೇವೆಗಳು ನಡೆದವು. ದೇವಾಲಯದ ಆವರಣದಲ್ಲಿ ಹದಿನೆಂಟು ಮೆಟ್ಟಿಲುಗಳಿರುವ ಮಂಟಪದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಹಾಮಂಗಳಾರತಿ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಸಂಜೆ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾ ವೃತಾಧಾರಿಗಳಿಂದ ಭಜನೆ ನಡೆಯಿತು. ಸಂಜೆ ಮಕರಜ್ಯೋತಿ ಪೂಜೆಯನ್ನು ನೆರವೇರಿಸಿದರು. ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ರುದ್ರಮ್ ಚಂಡೆ ಬಳಗದಿಂದ ಚಂಡೆ ಪ್ರದರ್ಶನ ಹಾಗೂ ವಿನಾಯಕ ಕುಣಿತ ಭಜನಾ ತಂಡದಿಂದ ಕುಣಿತ ಭಜನೆ, ಸ್ಥಳೀಯ ಭಕ್ತರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಹೋತ್ಸವದ ಪ್ರಯುಕ್ತ ದೇವಸ್ಥಾನವನ್ನು ವಿದ್ಯುತ್ ಹಾಗೂ ಹೂವುಗಳಿಂದ ಅಲಂಕರಿಸಲಾಗಿತ್ತು. ಗ್ರಾಮದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.