ಮಡಿಕೇರಿ ಜ.16 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಳು, ಬ್ಯಾರಿ, ಕೊಂಕಣಿ, ಕೊಡವ, ಅರೆಭಾಷೆ ಮತ್ತು ಯಕ್ಷಗಾನ ಅಕಾಡೆಮಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಇವರ ಸಂಯುಕ್ತಾಶ್ರಯದಲ್ಲಿ ಜ.17 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಬಹು ಸಂಸ್ಕೃತಿ ಉತ್ಸವ’ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನಿಡಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಮಂಗಳೂರು ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಆವರಣದಿಂದ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್.ಹೆಬ್ಬಾಳ್ಕರ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ಎಸ್.ತಂಗಡಗಿ, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಶಾಸಕರು, ಸಂಸದರು ಇತರರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.