ಮಡಿಕೇರಿ ಜ.17 NEWS DESK : ಬಾಳೆಲೆ ಆರೋಗ್ಯ ಕೇಂದ್ರದ ವಿಷಯವಾಗಿ ಮಹತ್ವದ ಸಭೆಯು ಬಾಳೆಲೆ ಕೊಡವ ಸಮಾಜ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವೈದ್ಯಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರೊಂದಿಗೆ ಚರ್ಚಿಸಿ, ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಆರೋಗ್ಯ ಕೇಂದ್ರದಲ್ಲಿನ ಹಲವು ನ್ಯೂನ್ಯತೆಗಳ ಬಗ್ಗೆ ಗಂಭೀರವಾಗಿ ಮಾತನಾಡಿದ ಶಾಸಕರು, ರೋಗಿಗಳಿಗೆ ಆಗುತ್ತಿರುವ ಅನಾನುಕೂಲಗಳ ಬಗ್ಗೆ ತಮಗೆ ಬಂದ ದೂರಿನ ವಿಷಯಗಳ ಕುರಿತು ಹೇಳಿದರು. ಇವುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಶೀಘ್ರವಾಗಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಆರೋಗ್ಯ ಕೇಂದ್ರದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸಾರ್ವಜನಿಕರ ಆರೋಗ್ಯ ಸಂಬಂಧಿತ ವಿಷಯದಲ್ಲಿ ಅತ್ಯಂತ ಗಂಭೀರವಾಗಿ ಕೆಲಸ ಮಾಡಬೇಕು. ರೋಗಿಗಳಿಗೆ ಸ್ಪಂದನೆ ನೀಡುವ ವಿಷಯದಲ್ಲಿ ಯಾವಾಗಲೂ ಮುಂಚೂಣಿಯಲ್ಲಿ ಇರಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ರಾಜ್ಯವನ್ಯ ಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷ ವಿನು ಉತ್ತಪ್ಪ, ಮಾಯಾಮುಡಿ ಪಂಚಾಯತ್ ಅಧ್ಯಕ್ಷ ಟಾಟು ಮೊಣ್ಣಪ್ಪ, ಬಾನಂಡ ಪೃಥ್ವಿ, ಅರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.