ಮಡಿಕೇರಿ ಜ.17 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಪ್ರಸಕ್ತ ವರ್ಷದಲ್ಲಿ ನಿಗಧಿ ಮಾಡಿರುವ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ಆರ್ಥಿಕ ವರ್ಷ ಕೊನೆಗೊಳ್ಳುವ ಹಂತದಲ್ಲಿದ್ದು, ಪ್ರಸಕ್ತ ವರ್ಷಕ್ಕೆ ನಿಗಧಿಮಾಡಿರುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ, ವರದಿ ನೀಡುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು. ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಜಂಟಿ ನಿರ್ದೇಶಕರಾದ ಚಂದ್ರಶೇಖರ ಅವರು ಪ್ರಸಕ್ತ ವರ್ಷದಲ್ಲಿ ಕೃಷಿ ಯಾಂತ್ರೀಕರಣ ಹಾಗೂ ಸೂಕ್ಷ್ಮ ನೀರಾವರಿ ಯೋಜನೆ ಸೇರಿದಂತೆ ವಿವಿಧ ಯೋಜನೆಯಡಿ ಶೇ.67ರಷ್ಟು ಪ್ರಗತಿ ಸಾಧಿಸಲಾಗಿದ್ದು, ಮಾರ್ಚ್ ಅಂತ್ಯದೊಳಗೆ ಶೇಕಡವಾರು ಪ್ರಗತಿ ಸಾಧಿಸಲಾಗುವುದು ಎಂದು ತಿಳಿಸಿದರು. ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ರೈತ ಮಹಿಳೆಯರಿಗೆ ಹೈನುಗಾರಿಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಸು, ಎಮ್ಮೆ ಖರೀದಿಗೆ ಶೇ.6ರಷ್ಟು ಬಡ್ಡಿ ದರದಲ್ಲಿ ಸಹಾಯಧನ ಕಲ್ಪಿಸಲಾಗುತ್ತಿದೆ. ಜೊತೆಗೆ ಹಾಲು ಉತ್ಪಾದಕರಿಗೆ ಉತ್ತೇಜನ ನೀಡಲಾಗುತ್ತಿದ್ದು, ಶೇ.100 ರಷ್ಟು ಸಾಧನೆ ಮಾಡಲಾಗಿದೆ ಎಂದು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಉಪ ನಿರ್ದೇಶಕರಾದ ಶೇಖರ್ ಅವರು ಪ್ರಸಕ್ತ ವರ್ಷದಲ್ಲಿ ಶೇ.87ರಷ್ಟು ಪ್ರಗತಿ ಸಾಧಿಸಲಾಗಿದ್ದು, ಉಳಿದಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಕಲ್ಪಿಸಲು ಬಾಕಿ ಇದ್ದು, ಒಂದು ತಿಂಗಳಲ್ಲಿ ಶೇಕಡಾವಾರು ಪ್ರಗತಿ ಸಾಧಿಸಲಾಗುವುದು ಎಂದು ಮಾಹಿತಿ ನೀಡಿದರು. ವಿದ್ಯಾರ್ಥಿ ನಿಲಯಗಳ ನಿರ್ವಹಣೆ, ವಸತಿ ಶಾಲೆಗಳು, ಕಾನೂನು ಪದವೀಧರರಿಗೆ ಪ್ರೋತ್ಸಾಹ ಹೀಗೆ ವಿವಿಧ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು ಅವರು ಮಾಹಿತಿ ನೀಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಶೇ.95 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು. ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾತಿ ಹೆಚ್ಚಳ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಅನುಷ್ಠಾನ, ಉದ್ಯೋಗಿನಿ ಹಾಗೂ ಚೇತನ ಯೋಜನೆಯಡಿ ಸೌಲಭ್ಯ ಹೀಗೆ ವಿವಿಧ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ನಟರಾಜು ವಿವರಿಸಿದರು. ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಸಚಿನ್ ಅವರು ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯಧನ ಕಲ್ಪಿಸಲಾಗುತ್ತಿದ್ದು, ಶೇ.60 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ವಿವರಿಸಿದರು. ಸಹಕಾರ ಇಲಾಖೆಯ ಸಹಾಯಕ ನಿಬಂಧಕರಾದ ಶೈಲಜಾ ಅವರು ಸಹಕಾರ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿ ಸಹಕಾರ ಸಂಘದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನಾಗಿ ನೋಂದಾಯಿಸಲು ಮುಂದಾಗಲಾಗಿದೆ ಎಂದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಲೋಕೇಶ್ ಅವರು ಮಾಹಿತಿ ನೀಡಿ ವಿದ್ಯಾರ್ಥಿ ನಿಲಯ ಸೌಲಭ್ಯ, ಪುಸ್ತಕ ವಿತರಣೆ ಸೇರಿದಂತೆ ವಿವಿಧ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಶಿರಾಜ್ ಅಹ್ಮದ್ ಅವರು ಬಾಲ ಕಾರ್ಮಿಕರ ಪುನರ್ ವಸತಿ ಹಾಗೂ ಯೋಜನಾ ಕಾರ್ಯಕ್ರಮದಡಿ ಶೇ.97ರಷ್ಟು ಪ್ರಗತಿ ಸಾಧಿಸಲಾಗಿದೆ. ಬಾಲಕಾರ್ಮಿಕ ಪದ್ಧತಿ, ದುಷ್ಪರಿಣಾಮ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ನಾಯಕ್ ಅವರು ಮಾತನಾಡಿ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಶೇ.86 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ ಅವರು ಮಾತನಾಡಿ ವಿದ್ಯಾರ್ಥಿ ಚೇತನ ಆಯುಷ್ ಸೇವಾ ಕಾರ್ಯಕ್ರಮದಡಿ ಶೇ.80 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ವಿವರಿಸಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ ಅವರು ಮಾತನಾಡಿ ನಗರಾಭಿವೃದ್ಧಿ/ ಪೌರಾಡಳಿತ ಇಲಾಖೆಯಿಂದ ಸಮುದಾಯ ಹಾಗೂ ವೈಯಕ್ತಿಕ ಕಾರ್ಯಕ್ರಮಗಳಿದ್ದು, ಹೆಚ್ಚಿನ ಪ್ರಗತಿ ಸಾಧಿಸಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪೌರಾಯುಕ್ತ ಹೆಚ್.ಆರ್.ರಮೇಶ್, ಅರ್ಹರಿಂದ ಅರ್ಜಿಗಳು ಸಲ್ಲಿಕೆ ಆಗುತ್ತಿಲ್ಲ ಎಂಬ ಅಂಶವನ್ನು ಸಭೆಯ ಗಮನಕ್ಕೆ ತಂದರು. ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ಗಿರಿಜನ ಉಪ ಯೋಜನೆಯಡಿ ಶೇ.83 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಇನ್ನು ಒಂದೂವರೆ ತಿಂಗಳಲ್ಲಿ ಶೇಕಡಾವಾರು ಪ್ರಗತಿ ಸಾಧಿಸಲಾಗುವುದು ಎಂದು ಹೇಳಿದರು. ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ಅವರು ಮುಂದಿನ ಫೆಬ್ರವರಿ ಮೊದಲ ವಾರದಲ್ಲಿ ಕೈಮಗ್ಗ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಏರ್ಪಡಿಸಿ ಪ್ರಗತಿ ಸಾಧಿಸಲಾಗುವುದು ಎಂದು ವಿವರಿಸಿದರು. ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಜೆ.ಬಿ.ಶ್ರೀಧರಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಾಷಾ ಇತರರು ಇದ್ದರು.