ಮಡಿಕೇರಿ ಜ.18 NEWS DESK : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ನಗರದ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ದಂಡ ಸಹಿತ 20 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹರದೂರು ಗ್ರಾಮದ ಎಸ್ಟೇಟ್‍ವೊಂದರ ಲೈನ್ ಮನೆಯಲ್ಲಿ ವಾಸವಿದ್ದ ರಮೇಶ ಎಂ.ಬಿ ಎಂಬಾತನೆ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ. ಲೈನ್ ಮನೆಯಲ್ಲಿ ವಾಸವಿದ್ದ ರಮೇಶ ಎಂ.ವಿ., 2021ರ ಆ.5 ರಂದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಎನ್ನುವ ಆರೋಪದಡಿ ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆ, ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ನಂತರ ತನಿಖೆ ಕೈಗೊಂಡು 2021ರ ಆ.7ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಪ್ರಕರಣದ ತನಿಖಾಧಿಕಾರಿ ಕುಶಾಲನಗರ ವೃತ್ತದ ಸಿಪಿಐ ಮಹೇಶ್ ಎಂ. ಹಾಗೂ ತನಿಖಾ ಸಹಾಯಕ ಲೋಕೇಶ್ ಹೆಚ್.ಎಸ್ ಅವರು ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಯನ್ನು 2021ರ ಸೆ.16 ರಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ರಮೇಶ ಎಂ.ವಿ ಗೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಒಟ್ಟು 20 ವರ್ಷಗಳ ಕಠಿಣ ಜೈಲು ಶಿಕ್ಷೆ, 5 ಸಾವಿರ ರೂ. ದಂಡ ಮತ್ತು ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.