ಮಡಿಕೇರಿ ಜ.18 NEWS DESK : ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಜನವರಿ, 19 ಮತ್ತು ಜನವರಿ, 25 ರಂದು ನಡೆಸಲಾಗುತ್ತಿರುವ ವಿವಿಧ ಇಲಾಖೆಗಳ ಗ್ರೂಪ್ “ಬಿ” ವೃಂದದ ಹುದ್ದೆಗಳ ನೇಮಕಾತಿಯ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಡಿಕೇರಿ (ಪ್ರೌಢ ಶಾಲೆ ವಿಭಾಗ), ಸಂತ ಮೈಕಲರ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪ್ರೌಢಶಾಲೆ, ಸಂತ ಜೋಸೆಫರ ಕಾನ್ವೆಂಟ್ ಹಾಗೂ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ಈ ಪರೀಕ್ಷಾ ಕೇಂದ್ರ ಸೇರಿದಂತೆ ಈ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಕಾರ್ಯ ನಡೆಸುವಂತಿಲ್ಲ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವಂತಿಲ್ಲ ಹಾಗೂ ಇನ್ನಿತರ ಮಾರಕ ಆಯುಧ ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಿದೆ. ಈ ಆದೇಶವು ಪರೀಕ್ಷೆ ಆರಂಭದ ಒಂದು ಗಂಟೆ ಮುಂಚಿತ ಅವಧಿಯಿಂದ ಪರೀಕ್ಷೆ ಮುಕ್ತಾಯದ ಒಂದು ಗಂಟೆ ನಂತರದವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅವರು ತಿಳಿಸಿದ್ದಾರೆ.