ಸೋಮವಾರಪೇಟೆ ಜ.21 NEWS DESK : ಗಣರಾಜ್ಯೋತ್ಸವ ಆಚರಣೆಯಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳದಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗುವುದೆಂದು ಎಂದು ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಹೇಳಿದರು. ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ತಹಶೀಲ್ದಾರ್ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಹಬ್ಬಗಳ ಆಚರಣೆ ಕುರಿತು ನಡೆಸುವ ಸಭೆಗೆ ಪ್ರತಿ ಬಾರಿಯೂ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸುತ್ತಿಲ್ಲ. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸು ನೀಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಬೇಕು. ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಯಲ್ಲೂ ಜನವರಿ 26ರ ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ನೆರವೇರಿಸಿ ನಂತರ ಪಟ್ಟಣದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದರು. ಮಾಜಿ ಸೈನಿಕರನ್ನು ಪಥಸಂಚಲನದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಬೇಕು. ಉಳಿದಂತೆ ಪೋಲೀಸ್, ಸ್ಕೌಟ್ಸ್ ಮತ್ತು ಗೈಡ್ಸ್, ಎನ್.ಸಿ.ಸಿ. ತಂಡಗಳು ಪಥಸಂಚಲನಕ್ಕೆ ಅಗತ್ಯ ತಯಾರಿ ಮಾಡಿಕೊಳ್ಳಬೇಕೆಂದು ತಿಳಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಪ್ರದರ್ಶನಕ್ಕೆ ಅವಕಾಶ ನೀಡಬೇಕು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಥವಾ ಇಲಾಖೆಗಳಲ್ಲಿ ಉತ್ತಮ ಸೇವೆ ಮಾಡಿದ ನಾಲ್ವರನ್ನು ಸನ್ಮಾನಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಸದಸ್ಯರು ಹಾಗು ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.