ಮಡಿಕೇರಿ NEWS DESK ಜ.22 : ಯುವ ಸಮೂಹಕ್ಕೆ ಉದ್ಯೋಗ ಸೃಷ್ಟಿಸುವ ದೃಷ್ಟಿಯಿಂದ ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿಗೆ 50 ಏಕರೆ ಭೂಮಿ ಮಂಜೂರು ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿ ಒತ್ತಾಯಿಸಿದೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿಯಿಂದ ಕೊಡಗು ಜಿಲ್ಲೆಗೆ ಆಗುವ ಅನುಕೂಲತೆಗಳ ಕುರಿತು ವಿವರಿಸಿದರು.
ಕೊಡಗು ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶಗಳಿಲ್ಲದ ಕಾರಣ ಯುವ ಜನತೆಗೆ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಉದ್ಯೋಗ ಹುಡುಕಿಕೊಂಡು ಅಕ್ಕ ಪಕ್ಕದ ಜಿಲ್ಲೆಗಳಿಗೆ, ರಾಜ್ಯಗಳಿಗೆ ಹೋಗುವ ಅನಿವಾರ್ಯತೆ ಎದುರಾಗಿದೆ. ಆದ್ದರಿಂದ ವಿರಾಜಪೇಟೆ ಅಥವಾ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಬೇಕು. ಸರಕಾರ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿಗೆ 50 ಏಕರೆ ಭೂಮಿ ನೀಡಬೇಕು ಎಂದರು.
ಜಿಲ್ಲೆಯಲ್ಲಿ KSSIDC ಗೋಡೌನ್, KSIIDC, KSFC ಸಾಲ ಅಥವಾ KIADB ಲ್ಯಾಂಡ್ ಸೌಲಭ್ಯಗಳನ್ನು ಹೊಂದಿಲ್ಲ. ಇದರಿಂದಾಗಿ ಯಾವುದೇ ಕೈಗಾರಿಕೆಗಳನ್ನು ಸ್ಥಾಪಿಸಲು ಸಾಧ್ಯವಾಗುತ್ತಿಲ್ಲ. ಕೈಗಾರಿಕಾ ಪ್ರದೇಶಾಭಿವೃದ್ಧಿಯಾದರೆ ಜಿಲ್ಲೆಗೆ ಸುಮಾರು 500-600 ಕೋಟಿ ರೂ. ಬಂಡವಾಳ ಸಾರ್ವಜನಿಕ ವಲಯದಿಂದ ತರಬಹುದಾಗಿದೆ.
5000 ಉದ್ಯೋಗ ಸೃಷ್ಟಿ ಜೊತೆಗೆ ಕನಿಷ್ಟ 100 ಕೋಟಿ ರಾಜಸ್ವ ಸಂಗ್ರಹಣೆಯಿಂದ ಮುಂದಿನ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂದು ಭೋಜಣ್ಣ ಸೋಮಯ್ಯ ಅವರು, ಶಾಸಕರಿಗೆ ಮನವರಿಕೆ ಮಾಡಿದರು.
ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯುವ ಹೂಡಿಕೆದಾರರ ಸಮಾವೇಶದಲ್ಲಿ ಈ ವಿಷಯವನ್ನು ಸರಕಾರದ ಮಟ್ಟದಲ್ಲಿ ಪ್ರಸ್ತಾಪಿಸಿ ಕೊಡಗು ಜಿಲ್ಲೆಗೆ ಅವಕಾಶ ಕಲ್ಪಿಸಬೇಕು ಎಂದು ಕೋರಿದರು.